ಶಿವಮೊಗ್ಗ: ಮರು ಬಳಕೆ ಮಾಡಲು ಸಾಧ್ಯವಿಲ್ಲದ ಪ್ಲಾಸ್ಟಿಕ್ ಬಳಕೆ ವಿರುದ್ಧ ಮುಂದಿನ 10 ದಿನಗಳ ಕಾಲ ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ಮುಕ್ತ ಸಮಾಜ ಅರಿವು ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಟ್ಟುನಿಟ್ಟಾಗಿ ಸ್ಥಗಿತಗೊಳಿಸಬೇಕು. ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಅಂಗಡಿ ಮುಂಗಟ್ಟುಗಳನ್ನು ಪರಿಶೀಲಿಸಿ ಪ್ಲಾಸ್ಟಿಕ್ ಜಪ್ತಿ ಮಾಡಿ ಕ್ರಮ ಕೈಗೊಳ್ಳಬೇಕು. ಶಾಲಾ ಕಾಲೇಜುಗಳಲ್ಲಿ ಪ್ಲಾಸ್ಟಿಕ್ ಬಗ್ಗೆ, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸೂಚಿಸಿದ್ರು.
ಪ್ಲಾಸ್ಟಿಕ್ ಬಳಕೆ ವಿರುದ್ಧ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವ ಅಗತ್ಯವಿದೆ. ಪ್ರತಿಯೊಬ್ಬರೂ ಅಂಗಡಿಗಳಿಗೆ ಹೋಗುವಾಗ ಬಟ್ಟೆ ಚೀಲವನ್ನು ಕೊಂಡೊಯ್ಯುವಂತೆ ಮನವೊಲಿಸಬೇಕು. ಈ ಕುರಿತು ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಮನೆಮನೆಗೆ ಭೇಟಿ, ಜಾಥಾ ಕಾರ್ಯಕ್ರಮ, ಬಟ್ಟೆ ಚೀಲ ವಿತರಣೆ, ಪ್ರತಿಜ್ಞಾ ಸ್ವೀಕಾರ ಇತ್ಯಾದಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದು ಎಂದು ಹೇಳಿದರು.
ಅಕ್ಟೋಬರ್ 2ರಂದು ಗಾಂಧಿ ಜಯಂತಿ ಪ್ರಯುಕ್ತ ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪವನ್ನು ಪ್ರತಿಯೊಬ್ಬರೂ ಮಾಡಬೇಕಿದೆ. ಇದಕ್ಕೆ ಪೂರ್ವಭಾವಿಯಾಗಿ ಪ್ಲಾಸ್ಟಿಕ್ ಬಳಕೆ ವಿರುದ್ಧ ವ್ಯಾಪಕ ಪ್ರಚಾರ ಕಾರ್ಯ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಹ ಪ್ಲಾಸ್ಟಿಕ್ ವಿರುದ್ಧ ಕಾರ್ಯಕ್ರಮಗಳನ್ನು ಈ ಅವಧಿಯಲ್ಲಿ ಮಾಡಬೇಕು ಎಂದು ಹೇಳಿದರು.
ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ:
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳ ಪ್ರಗತಿ ತೃಪ್ತಿಕರವಾಗಿಲ್ಲ. ನಿಗದಿತ ಅವಧಿಯೊಳಗಾಗಿ ಕಾಮಗಾರಿ ಅನುಷ್ಠಾನಗೊಳಿಸದಿದ್ದರೆ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಪ್ರಮೋದ್, ಎಲ್ಲಾ ನಗರಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಇಂಜಿನಿಯರುಗಳು ಸಭೆಯಲ್ಲಿ ಹಾಜರಿದ್ದರು.