ಶಿವಮೊಗ್ಗ: ಆಯುಷ್ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವಾಗಿ ಮೇಲ್ದರ್ಜೆಗೆ ಏರಿಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಇರುವ ಆಯುಷ್ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವಾಗಿ ಮೇಲ್ದರ್ಜೆಗೆ ಏರಿಸುವಂತೆ ಬಿಜೆಪಿ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್. ಶಂಕರ್ ಮೂರ್ತಿಯವರ ನೇತೃತ್ವದಲ್ಲಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಸಾಮಾಜಿಕ ಹೋರಾಟಗಾರರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೆವು. ನಮ್ಮ ಮನವಿಗೆ ಸ್ಪಂದಿಸಿ ಈ ಬಜೆಟ್ನಲ್ಲಿ ಆಯುಷ್ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವಾಗಿ ಮೇಲ್ದರ್ಜೆಗೆ ಏರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಸಂಘಟನೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.
ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಸೋಗಾನೆ ಬಳಿ 120 ಸರ್ವೆ ನಂಬರ್ನಲ್ಲಿ ನೂರು ಏಕರೆ ಜಾಗವನ್ನು ಮಂಜೂರು ಮಾಡಲಾಗಿದೆ ಎಂದರು. ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲಾ ಕಾಲೇಜುಗಳು ಶಿವಮೊಗ್ಗ ಆಯುಷ್ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಒಳಪಡುತ್ತವೆ. ಹಾಗಾಗಿ ಸರ್ಕಾರ ಕೂಡಲೇ ವಿಶ್ವವಿದ್ಯಾಲಯ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಆರ್ಯ ವೈಶ್ಯ ನಿಗಮ ಮಂಡಳಿಯ ಅಧ್ಯಕ್ಷ ಡಿಎಸ್ ಅರುಣ್ ಸೇರಿದಂತೆ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.