ಶಿವಮೊಗ್ಗ: ಕೊರೊನಾ ವೈರಸ್ ಇಡೀ ಜಗತ್ತನ್ನು ಆತಂಕಕ್ಕೆ ತಳ್ಳಿದೆ. ಆರ್ಥಿಕ ಯುದ್ಧದ ಸಂದರ್ಭದಲ್ಲಿಯೂ ಕೈಗಾರಿಕಾ ವಲಯದಲ್ಲಿನ ಸಮಸ್ಯೆಗಳು, ಸವಾಲುಗಳ ನಡುವೆಯೂ ದೇಶದ ಜಿಡಿಪಿಯ ಶೇ. 10ರಷ್ಟು ಪ್ಯಾಕೇಜ್ ಘೋಷಣೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾವಲಂಬನೆಯ ಭಾರತಕ್ಕೆ ಅಡಿಪಾಯ ಹಾಕಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕೊರೊನಾ ಸವಾಲಾಗಿ ಪರಿಣಮಿಸಿದೆ. ಪ್ರತಿ ಜೀವವನ್ನು ಉಳಿಸಿಕೊಳ್ಳುವ ಹಠದಿಂದ ಪ್ರಧಾನಿ ಮೋದಿಯವರು ಕ್ಷಣ ಕ್ಷಣವೂ ಕೆಲಸ ಮಾಡಿದ್ದಾರೆ. ವಿಶ್ವದ ಅನೇಕ ಅಭಿವೃದ್ಧಿ ಹೊಂದಿದ ದೇಶಗಳು ತತ್ತರಿಸಿದರೂ ಸಹ ನಮ್ಮ ದೇಶ ಉತ್ತಮ ಸ್ಥಿತಿಯಲ್ಲಿದೆ. ಇದಕ್ಕೆ ಕೇಂದ್ರ ಸರ್ಕಾರ ಕೈಗೊಂಡ ಲಾಕ್ಡೌನ್ನಂತಹ ನಿರ್ಧಾರಗಳೇ ಕಾರಣ ಎಂದರು.
ಕೊರೊನಾ ವೈರಸ್ ಸಾಕಷ್ಟು ಸಮಸ್ಯೆಗಳನ್ನು ತಂದೊಡ್ಡಿದೆ. ರೈತರಿಗೆ, ಕಾರ್ಮಿಕರಿಗೆ, ಕೈಗಾರಿಕೆಗಳಿಗೆ ಹಾಗೂ ಜನರಿಗೆ ತೊಂದರೆ ಆಗಬಾರದು ಎಂದು ಪ್ರಧಾನಿ ನರೇಂದ್ರ ಮೋದಿಯವರು 20 ಲಕ್ಷದ ವಿಶೇಷ ಪ್ಯಾಕೇಜನ್ನು ಘೋಷಣೆ ಮಾಡಿದ್ದಾರೆ. ಅಲ್ಲದೆ ಸ್ವಾವಲಂಬನೆ ಭಾರತಕ್ಕೆ ಅಡಿಪಾಯ ಹಾಕಿದ್ದಾರೆ ಎಂದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಯಾವ ಯೋಜನೆಯೂ ದುರ್ಬಳಕೆಯಾಗದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಿಗಾ ವಹಿಸುತ್ತಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದೇಶ ಕಟ್ಟುವ ಕೆಲಸ ಮಾಡುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ಎಲ್ಲಾ ವರ್ಗದ ಜನರಿಗೆ ಸಹಾಯ ಮಾಡುತ್ತಿವೆ. ಹಾಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.