ಶಿವಮೊಗ್ಗ: ಕರ್ನಾಟಕದಲ್ಲಿ ಡಾ. ಕಸ್ತೂರಿ ರಂಗನ್ ವರದಿ ಜಾರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರೇ ಕಾರಣರಾಗಿದ್ದು, ಪಶ್ಚಿಮಘಟ್ಟದ ಜನತೆಗೆ ದ್ರೋಹ ಎಸಗಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಬಿ.ಎ.ರಮೇಶ್ ಹೆಗ್ಡೆ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪನವರು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಲ್ಲಿ ರಾಜ್ಯದಲ್ಲಿ ಡಾ. ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವುದಿಲ್ಲ ಎಂದು ಭರವಸೆ ನೀಡಿದ್ದರು. ಆದರೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೂರೇ ತಿಂಗಳಲ್ಲಿ ರಾಷ್ಟ್ರೀಯ ಹಸಿರು ಪೀಠಕ್ಕೆ ಡಾ. ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದಾಗಿ ಪ್ರಮಾಣ ಪತ್ರ ಸಲ್ಲಿಸುವ ಮೂಲಕ ರಾಜ್ಯದ ಪಶ್ಚಿಮ ಘಟ್ಟಗಳ ಜನತೆಗೆ ದ್ರೋಹ ಬಗೆದಿದ್ದಾರೆ ಎಂದು ದೂರಿದರು.
ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವಾಲಯ, ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಬಗ್ಗೆ ಎರಡು ಬಾರಿ ಕರೆದಿದ್ದ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಸಂಸದರ ಸಭೆಗೆ ಯಡಿಯೂರಪ್ಪ ಗೈರು ಹಾಜರಾಗಿದ್ದರು. ಅಲ್ಲದೆ ಒಮ್ಮೆಯೂ ಸಂಸತ್ ಅಧಿವೇಶನದಲ್ಲಿ ಯಡಿಯೂರಪ್ಪ ಆಗಲಿ, ಹಾಲಿ ಸಂಸದ ಬಿ.ವೈ.ರಾಘವೇಂದ್ರ ಆಗಲಿ ಈ ಬಗ್ಗೆ ಪ್ರಸ್ತಾಪ ಮಾಡದಿರುವುದು ಅವರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಗೆ ಸಾಕ್ಷಿಯಾಗಿದೆ ಎಂದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2017ರಲ್ಲಿ ಈ ವರದಿ ಕೈ ಬಿಡುವಂತೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ಮನವಿ ತಿರಸ್ಕರಿಸಲಾಗಿದೆ. 2018ರಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಪ್ರಾಥಮಿಕ ಅಧಿಸೂಚನೆಯನ್ನು ಮೂರನೇ ಬಾರಿಗೆ ಹೊರಡಿಸಲಾಗಿದೆ. ಇದಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ನೇರ ಹೊಣೆಯಾಗಿದೆ ಎಂದರು.
ಈ ಮೂಲಕ ಕೇಂದ್ರ ಸರ್ಕಾರ ರಾಜ್ಯದ 1576 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವುದು ಅನಿವಾರ್ಯವಾಗಿದೆ. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಈ ವರದಿ ಬಗ್ಗೆ ಪ್ರಸ್ತಾಪಿಸದೇ ಇರುವುದು ಬಿಜೆಪಿ ವರದಿಯನ್ನ ಬೆಂಬಲಿಸಿದಂತಾಗಿದೆ ಎಂದರು. ವರದಿ ಜಾರಿಗೆ ಕಾರಣರಾಗಿರುವ ಬಿಜೆಪಿ ಸಂಸದರನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಿರಸ್ಕರಿಸುವಂತೆ ಪಶ್ಚಿಮ ಘಟ್ಟಗಳ ಜನತೆಗೆ ಮನವಿ ಮಾಡಿಕೊಂಡಿದ್ದಾರೆ.