ಶಿವಮೊಗ್ಗ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿರುವ ಎಪಿಜೆ ಅಬ್ದುಲ್ ಕಲಾಂ ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿ ಹಾಗೂ ಕುವೆಂಪು ವಿಶ್ವ ವಿದ್ಯಾಲಯದ ವಿರುದ್ಧ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಇಲಿಯಾಜ್ ನಗರದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಎಪಿಜೆ ಅಬ್ದುಲ್ ಕಲಾಂ ಅವರ ಹೆಸರಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 32 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರು. ಪರೀಕ್ಷೆ ಬರೆಯಲು ಪ್ರವೇಶ ಪತ್ರ ಕೇಳಲು ಹೋದ ಸಮಯದಲ್ಲಿ ಕಾಲೇಜು ಮಾನ್ಯತೆ ಇಲ್ಲದಿರುವುದು ಗೊತ್ತಾಗಿದೆ. ಈ ಕುರಿತು ವಿಶ್ವವಿದ್ಯಾಲಯದ ಗಮನಕ್ಕೆ ತಂದರು ಯಾವುದೇ ಸ್ಪಂದನೆ ನೀಡದೇ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಆಡುತ್ತಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ಕುರಿತು ಕುವೆಂಪು ವಿಶ್ವವಿದ್ಯಾಲಯಕ್ಕೆ ಕೇಳಿದರೆ ಕಾಲೇಜು ಮಾನ್ಯತೆ ಪಡೆದಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ವಿರುದ್ಧ ಆರೋಪ ಮಾಡುತ್ತಿದೆ. ಇನ್ನೊಂದೆಡೆ 32 ವಿದ್ಯಾರ್ಥಿಗಳು ವರ್ಷವಿಡಿ ಕಾಲೇಜಿಗೆ ಹೋಗಿ ಪರೀಕ್ಷೆ ಸಮಯದಲ್ಲಿ ಕಾಲೇಜಿಗೆ ಮಾನ್ಯತೆ ಸಿಕ್ಕಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ವಿಶ್ವವಿದ್ಯಾಲಯದ ಮೇಲೆ ಗೂಬೆ ಕೂರಿಸುತ್ತಿದೆ. ಹಾಗಾಗಿ 32 ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಆಡುತ್ತಿರುವ ಕಾಲೇಜು ಹಾಗೂ ವಿಶ್ವವಿದ್ಯಾಲಯದ ವಿರುದ್ಧ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.