ಶಿವಮೊಗ್ಗ: ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಹಾಗೂ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ರದ್ದುಮಾಡಿ ಸಂಸ್ಥೆಯ ಮುಖಾಂತರ ತೆಗೆದುಕೊಳ್ಳಬೇಕು ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ ಒದಗಿಸಬೇಕೆಂದು ಶ್ರೀ ಚೌಡೇಶ್ವರಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಹೊರಗುತ್ತಿಗೆ ಕಾರ್ಮಿಕ ಸಂಘದ ಅಧ್ಯಕ್ಷ ನರಸಿಂಹರಾಜು ಅವರು ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಡಳಿತಾಧಿಕಾರಿಗಳಿಗೆ ಹಾಗೂ ಸಚಿವರಿಗೆ ಒತ್ತಾಯಿಸಿದರು.
ಹಲವು ಬಾರಿ ನಮ್ಮ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಿದಾಗ ಸಚಿವರು, ಸಂಸದರು, ಶಾಸಕರುಗಳು ಬೇಡಿಕೆ ಈಡೆರಿಸುವುದಾಗಿ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೆ ನಮ್ಮ ಬೇಡಿಕೆಗಳು ಈಡೇರಿಲ್ಲ. ಕೇವಲ ಸುಳ್ಳು ಭರವಸೆಗಳನ್ನು ಜನಪ್ರತಿನಿಧಿಗಳು ನೀಡುತ್ತಿದ್ದಾರೆ ಎಂದು ಅವರು ದೂರಿದರು. ಕೊರೊನಾ ಸಂದರ್ಭದಲ್ಲಿಯೂ ಸಹ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಆದರೆ ಒಳಗುತ್ತಿಗೆ ನೌಕರರಿಗೆ ಒಂದು ವೇತನ, ಹೊರ ಗುತ್ತಿಗೆ ನೌಕರರಿಗೆ ಒಂದು ರೀತಿಯ ವೇತನ ನೀಡುವ ಮೂಲಕ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿನ ಸುಣ್ಣ ಎಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹಾಗಾಗಿ ಹೊರಗುತ್ತಿಗೆ ರದ್ದುಪಡಿಸಿ ಸಂಸ್ಥೆ ಮೂಲಕವೇ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಹಾಗೂ ಸೇವಾ ಭದ್ರತೆ ಒದಗಿಸಬೇಕು. ಈ ಬೇಡಿಕೆಗಳು ಈಡೇರದೇ ಹೋದರೆ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವದಿ ಮುಷ್ಕರ ಕೈಗೊಳ್ಳಲಾಗುವುದು ಎಂದು ನರಸಿಂಹ ರಾಜು ಎಚ್ಚರಿಕೆ ರವಾನಿಸಿದರು.