ಶಿವಮೊಗ್ಗ : ಬಂಜಾರ ಸಮುದಾಯದ ಆರಾಧ್ಯ ದೈವ ಸಂತ ಸೇವಾಲಾಲ್ ಅವರ ಪ್ರತಿರೂಪವೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘ ಆಯೋಜಿಸಿದ್ದ ಬಂಜಾರ ಸಮುದಾಯದ ಜ್ವಲಂತ ಸಮಸ್ಯೆಗಳ ಕುರಿತ ಸಮಾಲೋಚನಾ ಸಭೆಯಲ್ಲಿ ಬಂಜಾರ ಭಾಷೆಯಲ್ಲಿಯೇ ಅವರು ಮಾತನಾಡಿದರು.
ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ಬಂಜಾರ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಪ್ರತಿ ತಾಂಡಾಗಳಲ್ಲಿ ಬಂಜಾರ ಭವನ, ತಾಂಡಾ ಅಭಿವೃದ್ಧಿ ನಿಗಮ ಸೇರಿದಂತೆ ಸಾಕಷ್ಟು ಕೆಲಸ ಮಾಡಿದ್ದಾರೆ ಎಂದರು.
ಬಂಜಾರ್ ಸಮುದಾಯದಲ್ಲಿ ಮತಾಂತರ ಪ್ರವೃತ್ತಿ ಹೆಚ್ಚಾಗಿದೆ. ಅದನ್ನು ತಡೆದು ಬಂಜಾರ ಸಂಸ್ಕೃತಿ, ಭಾಷೆ, ಹಬ್ಬ ಹರಿದಿನಗಳ ಆಚರಣೆಯನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ನಮ್ಮ ಸರ್ಕಾರ ತಾಂಡಗಳನ್ನು ಕಂದಾಯ ಗ್ರಾಮಗಳನ್ನ ಮಾಡುತ್ತದೆ. ನಾವು ಸಹ ಹೋರಾಟ ಮಾಡಬೇಕು. ಜತೆಗೆ ಬಂಜಾರ ಸಮುದಾಯದಲ್ಲಿ ಇರುವ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲರೂ ಸಂಘಟಿತರಾಗಿ ಒಂದಾಗಬೇಕಿದೆ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಬಂಜಾರ ಸಮುದಾಯದ ಸೇವಾಲಾಲ್ ಸ್ವಾಮೀಜಿ, ಶಾಸಕ ಅಶೋಕ ನಾಯ್ಕ, ಮಲೆನಾಡು ಪ್ರದೇಶಾಭಿವೃದ್ಧಿ ನಿಗಮದ ಅಧ್ಯಕ್ಷ ಗುರುಮೂರ್ತಿ, ಬಂಜಾರ ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ಗೀರಿಶ್ ಹಾಗೂ ಸಮುದಾಯದ ಮುಖಂಡರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.