ಶಿವಮೊಗ್ಗ: ಕೊರೊನಾ ಎರಡನೇ ಅಲೆಗೆ ಕಡಿವಾಣ ಹಾಕುವ ಸಲುವಾಗಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಆಂಬ್ಯುಲೆನ್ಸ್ ಹಾಗೂ ಆಟೋ ಮೂಲಕ ಜಾಗೃತಿ ಮೂಡಿಸುತ್ತಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕಾಗಿ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸುತ್ತಿದೆ. ಕಳೆದ ವರ್ಷ ಮುಂಜಾಗ್ರತಾ ಕ್ರಮ ಕೈಗೊಂಡ ಪರಿಣಾಮವಾಗಿಯೇ ಜಿಲ್ಲೆಯಲ್ಲಿ ಕೊರೊನಾ ಸಂಪೂರ್ಣ ನಿಯಂತ್ರಣದಲ್ಲಿತ್ತು. ಹೀಗಾಗಿ 2ನೇ ಅಲೆಗೂ ಕಡಿವಾಣ ಹಾಕುವ ಸಲುವಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವತಿಯಿಂದ ಜಿಲ್ಲೆಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್, ಸ್ಯಾನಿಟೈಸರ್ ಬಳಕೆ ಜೊತೆ ಕೋವಿಡ್ ವ್ಯಾಕ್ಸಿನ್ ತೆಗೆದುಕೊಳ್ಳುವಂತೆ ಸಹ ಜಾಗೃತಿ ಮೂಡಿಸಲಾಗುತ್ತಿದೆ.
ಕೊರೊನಾ ನಿಯಂತ್ರಣಕ್ಕಾಗಿ ಕಳೆದ ಎರಡು ತಿಂಗಳಿಂದ ನಿಂರತರವಾಗಿ ಲಸಿಕಾ ಅಭಿಯಾನ ನಡೆಸಲಾಗುತ್ತಿದೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಜನರಿಂದ ಸ್ಪಂದನೆ ವ್ಯಕ್ತವಾಗುತ್ತಿಲ್ಲ. ಹೀಗಾಗಿ ಎರಡನೇ ಅಲೆ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ 45 ವರ್ಷ ಮೇಲ್ಪಟ್ಟವರು ಸ್ವಯಂ ಪ್ರೇರಿತರಾಗಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಳ್ಳಬೇಕು. ಇದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ ಎಂದು ಸಹ ಅರಿವು ಮೂಡಿಸಲಾಗುತ್ತಿದೆ.