ಶಿವಮೊಗ್ಗ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ನಾಗರಿಕರು ತಮ್ಮ ಜವಾಬ್ದಾರಿಯನ್ನು ಅರಿತು, ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮನವಿ ಮಾಡಿದರು. ಮಹಾನಗರ ಪಾಲಿಕೆ ಮತ್ತು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿ ಆಹಾರ ತಿಂಡಿಗಳನ್ನು ಮಾರಾಟ ಮಾಡುವುದನ್ನು ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ನಿರಂತರ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.
ಪರಿಸ್ಥಿತಿಗೆ ಅನುಗುಣವಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈಗಾಗಲೇ ರೈಲ್ವೇ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಲ್ಲಿ ಹೊರ ರಾಜ್ಯಗಳಿಂದ ಹಾಗೂ ಕೆಲವು ನಿರ್ದಿಷ್ಟ ನಗರಗಳಿಂದ ಆಗಮಿಸುವ ಪ್ರಯಾಣಿಕರಿಗೆ, ಥರ್ಮಲ್ ಸ್ಕ್ಯಾನರ್ ಮೂಲಕ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಮೆಗ್ಗಾನ್ ಆಸ್ಪತ್ರೆಯಲ್ಲಿ 150 ಹಾಸಿಗೆ ಇರುವ ಪ್ರತ್ಯೇಕ ವಾರ್ಡ್ ಸಜ್ಜುಗೊಳಿಸಲಾಗಿದೆ. ವಿದೇಶಗಳಿಂದ ಆಗಮಿಸಿರುವ ರೆಕಾರ್ಡ್ ಹೊಂದಿರುವ 76 ಮಂದಿಯ ಮೇಲೆ ನಿಗಾ ಇರಿಸಲಾಗಿದೆ. ಹಾಗೂ 6 ಮಂದಿಯನ್ನು ಆಸ್ಪತ್ರೆಯಲ್ಲಿ ಐಸೋಲೇಷನ್ ಘಟಕದಲ್ಲಿರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಾತ್ರೆ, ಪ್ರಾರ್ಥನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಸೇರುವುದನ್ನು ತಪ್ಪಿಸುವಂತೆ ಈಗಾಗಲೇ ಎಲ್ಲಾ ಧಾರ್ಮಿಕ ಕೇಂದ್ರಗಳಿಗೆ ಮನವಿ ಮಾಡಲಾಗಿದೆ. ಇದೇ ರೀತಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಸೇವೆ ಪಡೆಯುವ ಇಲಾಖೆಗಳಲ್ಲಿ ಟೋಕನ್ ವ್ಯವಸ್ಥೆ ಮೂಲಕ ಜನರು ಒಂದೆಡೆ ಸೇರುವುದನ್ನು ತಪ್ಪಿಸಲು ಸೂಚನೆ ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿಯೂ ಇಂತಹ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಲಾಗುವುದು ಎಂದರು.
ಜಿಲ್ಲೆಯಲ್ಲಿ ಹಕ್ಕಿಜ್ವರದ ಪ್ರಕರಣ ಇದುವರೆಗೆ ದೃಢಪಟ್ಟಿಲ್ಲವಾದರೂ, ನೆರೆಯ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವ ಹಿನ್ನೆಲೆ, ಶಿವಮೊಗ್ಗ ನಗರ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಪೌಲ್ಟ್ರಿ ಮಾಂಸ ಮಾರಾಟ ನಿಷೇಧಿಸಲು ಆದೇಶಿಸಲಾಗಿದೆ ಎಂದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಜಿ. ಅನುರಾಧ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ, ಡಾ. ಕಿರಣ್, ಶಿಮ್ಸ್ ನಿರ್ದೇಶಕರಾದ ಡಾ. ಲೇಪಾಕ್ಷಿ ಉಪಸ್ಥಿತರಿದ್ದರು.