ಶಿವಮೊಗ್ಗ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಈ ಕುರಿತು ತನಿಖೆ ನಡೆದು ಸತ್ಯಾಂಶ ಹೊರಬರಲಿ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದರು.
ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾತನಾಡುತ್ತಾ, ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು ಬರುವುದು ಸಹಜ. ಆದರೆ, ತನಿಖೆಯಿಂದ ಎಲ್ಲವೂ ಹೊರಬರಲಿದೆ ಎಂದರು.
ರಾಹುಲ್ ಗಾಂಧಿ ಮಾಡುತ್ತಿರುವ ಭಾರತ್ ಜೋಡೋ ಯಾತ್ರೆಯಿಂದ ಕಾಂಗ್ರೆಸ್ಗೆ ಯಾವುದೇ ಪ್ರಯೋಜನವಾಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ವಿಶ್ವ ನಾಯಕ. ಅವರ ನೇತೃತ್ವದಲ್ಲಿ ಮುಂಬರುವ ಚುನಾವಣೆ ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ತಮ್ಮ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿಲ್ಲ ಎಂದು ಚಾಮುಂಡೇಶ್ವರಿ ಮೇಲೆ ಸಿದ್ದರಾಮಯ್ಯ ಆಣೆ ಮಾಡಲಿ: ಈಶ್ವರಪ್ಪ ಸವಾಲು
ಬಿಜೆಪಿಯವರು ಹಿಂದುಳಿದ ವರ್ಗದವರನ್ನು ಸಿಎಂ ಮಾಡಲಿ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಬಿಎಸ್‌ವೈ, ನಮ್ಮ ಪ್ರಧಾನಿಯೇ ಹಿಂದುಳಿದ ವರ್ಗದವರು. ಹಿಂದುಳಿದ ವರ್ಗದ ಅನೇಕ ಮಂದಿ ವಿವಿಧ ರಾಜ್ಯಗಳಲ್ಲಿ ಸಿಎಂ ಆಗಿದ್ದಾರೆ. ದೇಶದ ಎರಡು ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ. ಸಿದ್ದರಾಮಯ್ಯನವರು ಹೀಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದರು.