ಶಿವಮೊಗ್ಗ : ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಅಭಿಯಾನದ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ವಿಶ್ವರಾಧ್ಯ ಹೆಚ್.ಯಮೋಜಿ ಆಗ್ರಹಿಸಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ವಾರಿಯರ್ಸ್ಗಳಾಗಿ ಸೇವೆ ಸಲ್ಲಿಸಿದ ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆಯ ಹಾಗೂ ಆರೋಗ್ಯ ಅಭಿಯಾನದ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಮಸ್ಯೆಗಳನ್ನು ಸರ್ಕಾರ ಬಗೆ ಹರಿಸದೇ ಮೌನ ವಹಿಸಿದೆ. ಕೂಡಲೇ, ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ, ಆರೋಗ್ಯ ಮತ್ತು ಜೀವ ವಿಮೆ, ಹೆಚ್.ಆರ್ ಪಾಲಿಸಿ ಸೇರಿದಂತೆ ಒಟ್ಟು 14 ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.
ಕೊರೊನಾ ಸಂದರ್ಭದಲ್ಲಿ ಮೃತಪಟ್ಟ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಕುಟುಂಬಗಳಿಗೆ 50 ಲಕ್ಷ ರೂ. ಪರಿಹಾರ ಮತ್ತು ಅನುಕಂಪದ ಆಧಾರದಲ್ಲಿ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು. ಕೋವಿಡ್ ಆಪತ್ತು ಪ್ರೋತ್ಸಾಹ ಧನವನ್ನು ಗುತ್ತಿಗೆ ಹಾಗೂ ಹೊರಗುತ್ತಿಗೆ ಕೋವಿಡ್ ವಾರಿಯರ್ಸ್ಗಳಿಗೂ ವಿಸ್ತರಿಸಬೇಕು. ಜೊತೆಗೆ ಒಂದು ತಿಂಗಳ ಹೆಚ್ಚುವರಿ ವೇತನ ನೀಡಿ, ನೌಕರರ ಆತ್ಮಸ್ಥೈರ್ಯ ಹೆಚ್ಚಿಸಬೇಕು ಎಂದರು.