ಶಿವಮೊಗ್ಗ: ಜಿಲ್ಲೆಯಲ್ಲಿ ಮಾರಣಾಂತಿಕ ಕೊರೊನಾ ವೈರಸ್ ಹರಡದಂತೆ ಜಿಲ್ಲಾ ಆರೋಗ್ಯ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಜನ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ ಹೇಳಿದ್ದಾರೆ.
ಸೋಂಕಿನ ಬಗ್ಗೆ ಎಚ್ಚರಿಕೆ ಅಗತ್ಯ. ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುಳ್ಳು ವದಂತಿಗಳಿಗೆ ಕಿವಿಗೊಡುವ ಅಗತ್ಯವಿಲ್ಲ. ಜಿಲ್ಲೆಗೆ ವಿದೇಶದಿಂದ ಆಗಮಿಸುವ ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆ ಇದೆ. ಅಲ್ಲದೇ ಅಂತಹ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗುತ್ತಿದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ವೈಯಕ್ತಿಕ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಕಾಯಿಲೆ ಇದಾಗಿದೆ. ಸೋಂಕಿತ ವ್ಯಕ್ತಿಯು ಸೀನಿದಾಗ ಮತ್ತು ಕೆಮ್ಮಿದಾಗ ಈ ವೈರಸ್ ಹರಡುತ್ತದೆ. ಸೋಂಕಿತ ವ್ಯಕ್ತಿಯ ಜೊತೆ ನಿಕಟ ಸಂಪರ್ಕದಲ್ಲಿರುವಾಗ, ಅಂತಹ ವ್ಯಕ್ತಿಯು ಬಳಸಿದ ವಸ್ತುಗಳನ್ನು ಯಾವುದೇ ರಕ್ಷಣೆ ಇಲ್ಲದೇ ಬಳಸಿದಾಗ, ಸ್ವಚ್ಛಗೊಳಿಸದ, ಸುರಕ್ಷಿತವಲ್ಲದ ಕೈಗಳಿಂದ ಕಣ್ಣು, ಮೂಗು, ಬಾಯಿಯನ್ನು ಮುಟ್ಟುವುದರಿಂದ ಈ ಕಾಯಿಲೆ ಹರಡಲಿದೆ ಎಂದರು.
ಕೊರೊನಾ ವೈರಸ್ ಪ್ರಾಣಿ ಮತ್ತು ಮನುಷ್ಯರಲ್ಲಿ ಮುಖ್ಯವಾಗಿ ಶ್ವಾಸಕೋಶ ಹಾಗೂ ಉಸಿರಾಟಕ್ಕೆ ತೊಂದರೆ ಉಂಟು ಮಾಡುತ್ತದೆ. ಜ್ವರ, ತಲೆನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯೂಮೋನಿಯಾ ಮತ್ತು ಭೇದಿ ಮುಂತಾದವು ಸೋಂಕಿನ ಲಕ್ಷಣಗಳಾಗಿವೆ. ಇದರ ಪತ್ತೆಗೆ ಸೋಂಕಿನ ಲಕ್ಷಣ ಕಂಡು ಬಂದ ವ್ಯಕ್ತಿಯ ಮೂಗು, ಗಂಟಲಿನ ಸ್ರಾವದ ಲೇಪನ ಮತ್ತು ರಕ್ತದ ಮಾದರಿಯನ್ನು ಪ್ರಯೋಗ ಶಾಲೆಯಲ್ಲಿ ಪರೀಕ್ಷೆಗೆ ಒಳಪಡಿಸಿ ಸೋಂಕನ್ನು ದೃಢಪಡಿಸಿಕೊಳ್ಳಲಾಗುವುದು ಎಂದರು.