ಶಿವಮೊಗ್ಗ: ರೈತ ವಿರೋಧಿ ಹಾಗೂ ಜನ ವಿರೋಧಿ ಕಾಯ್ದೆಗಳನ್ನು ಬಾರಿಗೆ ತಂದಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಇದೇ ತಿಂಗಳ 28 ರಂದು ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ಗೆ ಶಿವಮೊಗ್ಗ ಜಿಲ್ಲೆಯ ರೈತ ಸಂಘ ಸಂಪೂರ್ಣ ಬೆಂಬಲ ನೀಡಿದೆ ಎಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ. ವೀರೇಶ್ ತಿಳಿಸಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿದಂತೆ ವಿವಿಧ ಜನ ವಿರೋಧಿ ಹಾಗೂ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ರೈತರ ಕೆಂಗಣ್ಣಿಗೆ ಸರ್ಕಾರ ಗುರಿಯಾಗಿದೆ. ಹಾಗಾಗಿ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ಶಿವಮೊಗ್ಗ ಜಿಲ್ಲೆಯ ರೈತ ಸಂಘ ಸಂಪೂರ್ಣ ಬೆಂಬಲ ಸೂಚಿಸುತ್ತದೆ ಎಂದರು.
ಬಂದ್ಗೆ ಜಿಲ್ಲೆಯ ಆಟೋ ಚಾಲಕರ ಸಂಘ, ಟ್ಯಾಕ್ಸಿ ಚಾಲಕರ ಸಂಘ, ಕನ್ನಡಪರ ಸಂಘಟನೆಗಳು, ಎಲ್ಲ ರಾಜಕೀಯ ಪಕ್ಷಗಳು, ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳು ರೈತ ಸಂಘಟನೆ ಹಾಗೂ ವಿವಿಧ ಸಂಘಟನೆಗಳು ಬೆಂಬಲ ಸೂಚಿಸುವಂತೆ ಮನವಿ ಮಾಡಿಕೊಂಡರು. ಸರ್ಕಾರ ರೈತ ವಿರೋಧಿ ಹಾಗೂ ಜನ ವಿರೋಧಿ ಕಾಯ್ದೆಗಳನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು ಎಂದು ಒತ್ತಾಯಿಸಿದರು.