ಶಿವಮೊಗ್ಗ: ಕೊರೊನಾ ವೈರಸ್ ಸೋಂಕು ಜಿಲ್ಲೆಗೆ ಬರುವುದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಲ್ಲಿ ಜ್ವರ ತಪಾಸಣೆಗೆ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ, ಕೊರೊನಾ ವೈರಸ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಜ್ವರ, ನೆಗಡಿ, ಕೆಮ್ಮಿನ ಲಕ್ಷಣ ಇರುವವರ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಅಗತ್ಯವಿದ್ದರೆ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದು ಕೊರೊನಾ ವೈರಸ್ ಪರೀಕ್ಷೆ ನಡೆಸಬೇಕು. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಕ್ರಿಮಿನಾಶಕಗಳನ್ನು ನಿಯಮಿತವಾಗಿ ಸಿಂಪಡಿಸುವ ಕಾರ್ಯ ಆರಂಭಿಸಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸರ್ಕಾರಿ ಕಚೇರಿಗಳಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಅನುಸರಿಸಲು ಸೂಚನೆ ನೀಡಬೇಕು ಎಂದರು.
ಈಗಾಗಲೇ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಇದೇ ರೀತಿ ಜಾತ್ರೆ ಮತ್ತು ಮದುವೆ ಸಮಾರಂಭಗಳನ್ನು ದೊಡ್ಡ ಪ್ರಮಾಣದಲ್ಲಿ ಮಾಡದಂತೆ ಸೂಚನೆ ನೀಡಲಾಗಿದೆ. ಎಲ್ಲಾ ಮಾಲ್, ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ. ಕೊರೊನಾ ವೈರಸ್ ಕುರಿತಂತೆ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವಂತಹ, ಕಾನೂನು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಂದೇಶಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.
ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿರುವ ಪ್ರಯೋಗಾಲಯದಲ್ಲಿ ಇದುವರೆಗೆ 34 ಶಂಕಿತ ಪ್ರಕರಣಗಳ ಪರೀಕ್ಷೆ ನಡೆಸಲಾಗಿದ್ದು, ಎಲ್ಲಾ ಪ್ರಕರಣಗಳು ನೆಗೆಟಿವ್ ಬಂದಿವೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ 5 ಪರೀಕ್ಷೆ ನಡೆಸಲಾಗಿದೆ. ನೆರೆಯ ರಾಜ್ಯಗಳಿಂದಲೂ ಪರೀಕ್ಷೆಗಾಗಿ ಸ್ಯಾಂಪಲ್‍ಗಳನ್ನು ಸ್ವೀಕರಿಸಲಾಗಿದೆ. ಜಿಲ್ಲೆಯಲ್ಲಿ ವಿದೇಶಗಳಿಂದ ಆಗಮಿಸಿದ 49 ಮಂದಿಯ ಮೇಲೆ ನಿಗಾ ಇರಿಸಲಾಗಿದ್ದು, 14 ದಿನಗಳ ಕಾಲ ನಿಗಾ ಇರಿಸಲಾಗುತ್ತಿದೆ. ಮೆಗ್ಗಾನ್‍ನಲ್ಲಿ ಸದ್ಯ 30 ಹಾಸಿಗೆಯ ಐಸೋಲೇಶನ್ ವಾರ್ಡ್ ಸಜ್ಜುಗೊಳಿಸಲಾಗಿದ್ದು, 100 ಬೆಡ್ ವಾರ್ಡ್ ಸಿದ್ಧಪಡಿಸಲಾಗುತ್ತಿದೆ. ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ 100ಬೆಡ್ ಐಸೋಲೇಷನ್ ವಾರ್ಡ್ ಸಜ್ಜುಗೊಳಿಸಲು ಸೂಚಿಸಲಾಗಿದೆ ಎಂದರು.
ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ ಹೆಚ್.ಟಿ., ಸಿಮ್ಸ್ ನಿರ್ದೇಶಕ ಡಾ.ಲೇಪಾಕ್ಷಿ, ಡಾ.ಶಂಕರಪ್ಪ ಮತ್ತಿತರರು ಉಪಸ್ಥಿತರಿದ್ದರು.