ಬೆಂಗಳೂರು : ಶಿವಮೊಗ್ಗ ಜಿಲ್ಲೆಯಲ್ಲಿರುವ ಸಿಗಂಧೂರು ಚೌಡೇಶ್ವರಿ ದೇವಾಲಯದ ಹೆಸರಿನಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ಒತ್ತುವರಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಹಶೀಲ್ದಾರ್ ಸ್ಥಳ ಪರಿಶೀಲನೆ ನಡೆಸಿ ಹಾಗೂ ಸರ್ವೆ ನಡೆಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ.
ಈ ಕುರಿತು ಸಾಗರ ತಾಲೂಕಿನ ಲಕ್ಷ್ಮೀನಾರಾಯಣ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತು. ಅಲ್ಲದೆ, ಅರ್ಜಿದಾರರು ಆರೋಪಿಸಿರುವಂತೆ ಅರಣ್ಯ ಭೂಮಿ ಒತ್ತುವರಿಯಾಗಿದೆ ಎಂಬುದರ ಕುರಿತು ಸ್ಥಳೀಯ ತಹಸಿಲ್ದಾರ್ ಸರ್ವೆ ನಡೆಸಬೇಕು. ಒತ್ತುವರಿಯಾಗಿದ್ದರೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾನೂನು ರೀತಿ ಕ್ರಮ ಜರುಗಿಸಬೇಕು. ಈ ಕುರಿತ ವರದಿಯನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿತು.
ಅರ್ಜಿದಾರ ಕೋರಿಕೆ :
ಶಿವಮೊಗ್ಗದ ಸಾಗರ ತಾಲೂಕಿನ ಕಸವಳ್ಳಿ ಗ್ರಾಮದ ಸರ್ವೇ ನಂಬರ್ 65 ರಲ್ಲಿನ ಸರ್ಕಾರಿ ಅರಣ್ಯಭೂಮಿಯನ್ನು ದೇವಸ್ಥಾನದ ಹೆಸರಿನಲ್ಲಿ ಒತ್ತುವರಿ ಮಾಡಲಾಗಿದೆ. ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ತೆರವು ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ. ದೇವಾಲಯದ ಹೆಸರಿನಲ್ಲಿ ಸಾರ್ವಜನಿಕರಿಂದ ಸಾವಿರಾರು ಕೋಟಿ ರೂಪಾಯಿ ಹಣ ಸಂಗ್ರಹಿಸಿದ್ದು, ವಾರ್ಷಿಕ ಐದು ಕೋಟಿ ಮಾತ್ರ ಲೆಕ್ಕಪತ್ರದಲ್ಲಿ ತೋರಿಸಿದ್ದಾರೆ. ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿರುವ ಅರ್ಜಿದಾರರು, ಒತ್ತುವರಿಯಾಗಿರುವ ಅರಣ್ಯಭೂಮಿಯನ್ನು ತೆರವುಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಹಾಗೂ ದೇವಸ್ಥಾನದ ಆಡಳಿತವನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳುವಂತೆ ಆದೇಶಿಸಬೇಕು ಎಂದು ಕೋರಿದ್ದಾರೆ.