ಶಿವಮೊಗ್ಗ: ತೈಲ ಹಾಗೂ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೀತಿ ಖಂಡಿಸಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿಯ ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಬಿ.ಹೆಚ್ ರಸ್ತೆಯ ಮೂಲಕ ಹಾಲಪ್ಪ ವೃತ್ತ, ಮಾಧವಾಚಾರ್ ವೃತ್ತದ ಮೂಲಕ ತಹಶೀಲ್ದಾರ್ ಕಚೇರಿಗೆ ತಲುಪಿತು. ಬಳಿಕ ಕಚೇರಿಯ ಮುಂಭಾಗದಲ್ಲಿ ಬಹಿರಂಗ ಸಮಾವೇಶ ನಡೆಸಲಾಯಿತು.
ಕತ್ತೆ, ಎತ್ತಿನಗಾಡಿ, ಟ್ರ್ಯಾಕ್ಟರ್ ರ್ಯಾಲಿ ನಡೆಸುವ ಮೂಲಕ ಸರ್ಕಾರಗಳ ತೈಲ ಬೆಲೆ ಏರಿಕೆಯನ್ನು ಖಂಡಿಸಲಾಯಿತು. ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ ಭಾರೀ ಬದಲಾವಣೆ ತರುವ ಭರವಸೆ ನೀಡಿಯೇ ಅಧಿಕಾರಕ್ಕೆ ಬಂದಿದೆ. ಈಗ ಜನ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ. ತಾವು ಅಧಿಕಾರಕ್ಕೆ ಬಂದ್ರೆ, ತೈಲ ಬೆಲೆ ಇಳಿಕೆ ಮಾಡಲಾಗುವುದು ಎಂದು ಹೇಳಿದ್ದವರು ಈಗ ಪ್ರತಿ ನಿತ್ಯ ಏರಿಕೆ ಮಾಡುತ್ತಿದ್ದಾರೆ. ಇದರಿಂದ ದಿನ ಬಳಕೆ ವಸ್ತುಗಳ ದರ ಸಹ ಏರಿಕೆಯಾಗುತ್ತಿದೆ. ಇದು ಜನಸಾಮಾನ್ಯರ ಬದುಕಿನ ಮೇಲೆ ಗಂಭೀರ ಪರಿಣಾಮ ಉಂಟು ಮಾಡುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ ಅಡುಗೆ ಅನಿಲ ದರ ಏರಿಕೆ ಮಾಡಿದಾಗ ಬೀದಿಗೆ ಬಂದಿದ್ದ ಬಿಜೆಪಿಯವರು ಈಗ ಅವರೇ ದರ ಏರಿಕೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರವನ್ನೇ ರಾಜ್ಯದ ಬಿಜೆಪಿ ಸರ್ಕಾರ ಅನುಸರಿಸುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ ತಲಾ 7 ಕೆ.ಜಿ. ಅಕ್ಕಿ ನೀಡಲಾಗುತ್ತಿತ್ತು. ಆದರೆ ಈಗ ಅದನ್ನು 5 ಕೆ.ಜಿ.ಗೆ ಇಳಿಸಲಾಗಿದೆ. ಇದು ಬಡವರ ಹಾಗೂ ಪ್ರಜಾ ಪ್ರಭುತ್ವ ವಿರೋಧಿ ಸರ್ಕಾರವಾಗಿದೆ. ಈ ಎರಡು ಸರ್ಕಾರಗಳನ್ನು ಜನ ಈಗಾಗಲೇ ಕಿತ್ತು ಹಾಕಲು ತೀರ್ಮಾನ ಮಾಡಿದ್ದಾರೆ ಎಂದು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, ದೇಶದಲ್ಲಿ ಬಿಜೆಪಿ ಬಗರ್ ಹುಕುಂ ಸರ್ಕಾರವಾಗಿದೆ. ಬಡವರು ಇಂದು ಜೀವನ ನಡೆಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗಿದೆ. ಮೋದಿ ಗಡ್ಡ ಬಿಟ್ಟಿದ್ದಾರೆ. ಹಾಗೇಯೇ ಹಿಮಾಲಯಕ್ಕೆ ಹೋಗಲಿ, ಇವರಿಗೆ ಅಡಳಿತ ನಡೆಸಲು ಬರಲ್ಲ ಎಂದು ಕಿಡಿಕಾರಿದರು.