ಶಿವಮೊಗ್ಗ : ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್‌ಡೌನ್ ಘೋಷಣೆ ಮಾಡಿದೆ.
ಹಾಗೆಯೇ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುರುವಾರರಿಂದ ಭಾನುವಾರದವರೆಗೂ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿತ್ತು.
ಸಂಪೂರ್ಣ ಲಾಕ್‌ಡೌನ್ ಮಾಡಿದ ನಾಲ್ಕು ದಿನಗಳ ಕಾಲ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾದ ಹಿನ್ನೆಲೆ, ಇಂದಿನಿಂದ ಭಾನುವಾರದವರೆಗೆ ಮತ್ತೆ ಸಂಪೂರ್ಣ ಲಾಕ್‌ಡೌನ್ ಮುಂದುವರಿಸಲು ಜಿಲ್ಲಾಡಳಿತ ಸಭಾಂಗಣದಲ್ಲಿ ಆಯೋಜಿಸಿದ್ದ ಕೋವಿಡ್ ನಿಯಂತ್ರಣ ಸಭೆಯಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಘೋಷಣೆ ಮಾಡಿದರು.
ದಿನಸಿ ಅಂಗಡಿಗಳಿಗೆ ವ್ಯಾಪಾರಕ್ಕೆ ಬೆಳಗ್ಗೆ ಒಂಬತ್ತು ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಹಾಗೂ ಎಪಿಎಂಸಿ ಮಾರುಕಟ್ಟೆಯಲ್ಲಿ ವ್ಯಾಪಾರಕ್ಕೆ ಬೆಳಗ್ಗೆ ಏಳು ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಅರಗ ಜ್ಞಾನೇಂದ್ರ, ಕುಮಾರ್ ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಆರ್ ಪ್ರಸನ್ನ ಕುಮಾರ್, ಎಸ್ ರುದ್ರೇಗೌಡ, ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ಸೇರಿದಂತೆ ವರ್ತಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.