ಶಿವಮೊಗ್ಗ: ಮಕ್ಕಳಲ್ಲಿ ಭೇದಿಗೆ ಕಾರಣವಾಗುವ ರೋಟಾ ವೈರಸ್ ತಡೆಗೆ ಹೊಸ ಲಸಿಕೆಯನ್ನು ನೀಡಲಾಗುತ್ತಿದ್ದು, ಪ್ರತಿಯೊಂದು ಮಗುವಿಗೆ ಹಾಕಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿವಿಧ ಯೋಜನೆಗಳ ಅನುಷ್ಠಾನ ಕುರಿತು ಸಭೆ ನಡೆಸಿದರು.
ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಟಾ ವೈರಸ್ ಲಸಿಕೆ ನೀಡಲಾಗುತ್ತಿದ್ದು, ಮಗುವಿಗೆ 6, 10 ಮತ್ತು 14ನೇ ವಾರದಲ್ಲಿ ಈ ಲಸಿಕೆಯನ್ನು ಹಾಕಿಸಬೇಕು. ತಮ್ಮ ವ್ಯಾಪ್ತಿಯಲ್ಲಿರುವ ಎಲ್ಲ ಮಕ್ಕಳಿಗೂ ರೋಟಾ ವೈರಸ್ ಲಸಿಕೆ ಹಾಕಿರುವುದನ್ನು ಖಾತ್ರಿಪಡಿಸುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಕೋಟ್ಪಾ ಕಾಯ್ದೆ ಕಟ್ಟುನಿಟ್ಟಿನಿಂದ ಜಾರಿ: ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸುವ ಕೋಟ್ಪಾ ಕಾಯ್ದೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಶಾಲೆಗಳ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೂ ತಂಬಾಕು ಉತ್ಪನ್ನ ಮಾರಾಟಕ್ಕೆ ಅವಕಾಶ ನೀಡಬಾರದು. ಜಿಲ್ಲೆಯಲ್ಲಿ ಕಳೆದ ಏಪ್ರಿಲ್‍ನಿಂದ ಈವರೆಗೆ 589 ಕೊಟ್ಪಾ ದಾಳಿಗಳನ್ನು ನಡೆಸಲಾಗಿದೆ. ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಈ ಕಾರ್ಯದಲ್ಲಿ ಸಹಕರಿಸಬೇಕು ಎಂದರು.
ನೀರಿನ ಪರೀಕ್ಷೆ ಮಾಡಬೇಕು: ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಿವೆ. ಮುಂಜಾಗೃತ ಕ್ರಮಗಳಿಂದ ಸಾಂಕ್ರಾಮಿಕ ರೋಗಗಳು ಹರಡಿಲ್ಲ. ಇನ್ನು ಮುಂದೆಯೂ ಜಾಗರೂಕತೆಯಿಂದ ಇರಬೇಕು. ಕುಡಿಯುವ ನೀರಿನ ಗುಣಮಟ್ಟವನ್ನು ನಿರಂತರವಾಗಿ ಪರೀಕ್ಷೆ ಮಾಡಬೇಕು ಎಂದು ಅವರು ಸೂಚಿಸಿದರು.
ಜಿಲ್ಲೆಯಲ್ಲಿ 298 ಹಾಲು ನೋಂದಣಿ ಕೇಂದ್ರಗಳಿದ್ದು, ಕೇವಲ 4 ಮಾದರಿಗಳನ್ನು ಮಾತ್ರ ಪರೀಕ್ಷೆ ಮಾಡಲಾಗಿದೆ. ಇದೇ ರೀತಿ ಕುಡಿಯುವ ನೀರಿನ ಘಟಕಗಳ ಮೇಲೆ ಸಹ ನಿಗಾ ಇರಿಸಬೇಕು ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಟಿ.ಶೇಖರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿನಹಳ್ಳಿ, ಡಾ.ನಾಗರಾಜ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಂಕರಪ್ಪ, ಡಾ.ಕಿರಣ ಕುಮಾರ್ ಸೇರಿದಂತೆ ವೈದ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.