ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿಯವರು ಹಿಟ್ಲರ್ ಮಾದರಿಯ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ, ಕಾರ್ಮಿಕ ಕಾಯ್ದೆ ಹೀಗೆ ಹೊಸ ಹೊಸ ನೀತಿಗಳನ್ನು ಜಾರಿಗೆ ತರುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿವೆ ಎಂದು ಆರೋಪಿಸಿದರು.
ಇಂತಹ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಶ್ರೀಮಂತರನ್ನು ಇನ್ನಷ್ಟು ಶ್ರಿಮಂತರಾನ್ನಾಗಿಸಲು ಸರ್ಕಾರಗಳು ಹೊರಟಿವೆ. ಜನಾಭಿಪ್ರಾಯ ಇಲ್ಲದೆ ಶಾಸನ ಸಭೆಯಲ್ಲಿ, ಪಾರ್ಲಿಮೆಂಟ್‌ನಲ್ಲಿ ಚರ್ಚಿಸದೆ ಸುಗ್ರಿವಾಜ್ಞೆ ಹೊರಡಿಸುವ ಮೂಲಕ ಕಾನೂನುಗಳನ್ನು ಜಾರಿಗೆ ತರಲಾಗುತ್ತಿದೆ. ಈ ಮೂಲಕ ದೇಶವನ್ನು ಹಾಳು ಮಾಡಲು ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರ್ಕಾರ ಹೊರಟಿದೆ ಎಂದರು.
ಭೂ ಸುಧಾರಣಾ ಕಾಯ್ದೆ ರೈತರ ಪರವಾಗಿರದೆ ಶ್ರೀಮಂತರ ಹಾಗೂ ಭೂ ಹಿಡುವಳಿದಾರರ ಪರವಾಗಿದೆ. ಈ ಕಾಯ್ದೆ ಜಾರಿಗೆ ನನ್ನ ವಿರೋಧವಿದ್ದು, ಮುಂದಿನ ದಿನಗಳಲ್ಲಿ ಪಾದಯಾತ್ರೆ ಮಾಡುವ ಮೂಲಕ ಹೋರಾಟ ಮಾಡುವುದಾಗಿ ತಿಳಿಸಿದರು.