ಶಿವಮೊಗ್ಗ: ಅಂತರ್ಜಲ ಚೇತನ ಯೋಜನೆಯನ್ನು ಮುಂದಿನ ಒಂದು ವರ್ಷದ ಅವಧಿಯೊಳಗಾಗಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಾಲೂಕು ಸೂಗೂರಿನ ಕ್ಯಾತಿನಕೊಪ್ಪ ಗ್ರಾಮದಲ್ಲಿ ಅಂತರ್ಜಲ ಚೇತನ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆ ನೀರು ಸಂಗ್ರಹಣೆ ಮತ್ತು ಮಣ್ಣಿನ ಸವಕಳಿ ತಡೆಯುವುದು, ಮಣ್ಣಿನ ತೇವಾಂಶ ಹೆಚ್ಚಿಸುವುದು, ಸ್ವಾಭಾವಿಕ ಹಳ್ಳಗಳಿಗೆ ಕೃತಕ ಅಂರ್ತಜಲ ಮರುಪೂರಣ ರಚನೆಗಳನ್ನು ನಿರ್ಮಿಸುವುದು ಹಾಗೂ ಸ್ವಾಭಾವಿಕ ಸಸ್ಯ ವರ್ಗ ಹೆಚ್ಚಿಸುವ ಉದ್ದೇಶದಿಂದಾಗಿ ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದ ಜಾರಿಗೆ ತಂದಿರುವ ಯೋಜನೆ ಇದಾಗಿದೆ ಎಂದು ಹೇಳಿದರು.
ಶಿವಮೊಗ್ಗ ಸೇರಿದಂತೆ ಇತರೆ 8 ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಅಂತರ್ಜಲ ಚೇತನ ಯೋಜನೆ ಜಾರಿಗೆ ತರಲಾಗಿದೆ. ಎಲ್ಲಾ ಕಾಮಗಾರಿಗಳು ನಿರೀಕ್ಷೆಯಂತೆ ಪೂರ್ಣಗೊಳ್ಳಲು ಸಮುದಾಯದ ಸಹಭಾಗಿತ್ವ ಮಹತ್ವದ್ದಾಗಿದೆ ಎಂದರು.
ಈ ಯೋಜನೆಯಿಂದ ಜಿಲ್ಲೆಯ 271 ಗ್ರಾಮ ಪಂಚಾಯಿತಿಗಳ ಸುಮಾರು 8.82 ಲಕ್ಷ ಜನರಿಗೆ ಉಪಯೋಗವಾಗಲಿದೆ. ಈ ಯೋಜನೆಯಡಿ ಬೋಲ್ಡರ್ ಚೆಕ್(ಕಲ್ಲುಗುಂಡು ತಡೆ) ನಿರ್ಮಾಣ, ಇಂಗು ಬಾವಿ, ಇಂಗು ಕೊಳವೆ, ಕೆರೆ ಹೊಂಡ ಸೇರಿದಂತೆ ಒಟ್ಟು 32,731 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೆರವಿನೊಂದಿಗೆ ಯೋಜನೆಗೆ 252 ಕೋಟಿ ರೂಪಾಯಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದರು.
ಈ ಯೋಜನೆಯ ವ್ಯವಸ್ಥಿತ ಅನುಷ್ಠಾನಕ್ಕಾಗಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ತಜ್ಞ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ಸೂಕ್ತ ಸಲಹೆ, ಸೂಚನೆ ನೀಡುವುದರ ಜೊತೆಗೆ ಉಸ್ತುವಾರಿಯನ್ನು ವಹಿಸಲಿದ್ದಾರೆ. ಹಂತ-ಹಂತವಾಗಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದರು.
ಸಾಕಷ್ಟು ಮಳೆಯಾಗುತ್ತಿದ್ದರೂ ನೀರನ್ನು ವ್ಯವಸ್ಥಿತವಾಗಿ ಬಳಸಿಕೊಳ್ಳದೆ ಅನಗತ್ಯವಾಗಿ ಅಗತ್ಯಕ್ಕಿಂತ ಹೆಚ್ಚಾಗಿ ನೆಲದಿಂದ ನೀರನ್ನು ಮೇಲೆತ್ತಿ ಅಂತರ್ಜಲ ಖಾಲಿ ಮಾಡಲಾಗಿದೆ. 2-3 ದಶಕಗಳ ಹಿಂದೆ ಮಳೆ ನೀರಿನ ಶೇ. 40ರಷ್ಟು ನೀರು ಭೂಮಿಯಲ್ಲಿ ಇಂಗುತ್ತಿತ್ತು. ಆದರೆ, ಇಂದು ಅದರ ಪ್ರಮಾಣ ಶೇ. 5ಕ್ಕೆ ಬಂದು ನಿಂತಿದೆ. ಈ ಸಂದರ್ಭದಲ್ಲಿ ಮನುಷ್ಯ ಪ್ರಕೃತಿಯ ಋಣ ತೀರಿಸಬೇಕಿದ್ದು, ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಸಚಿವರು ಸಾರ್ವಜನಿಕರಿಗೆ ಮನವಿ ಮಾಡಿದರು.