ಶಿವಮೊಗ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ 14 ದಿನಗಳಿಂದ ನಡೆಸುತ್ತಿದ್ದ ವೈದ್ಯಕೀಯ ಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರವನ್ನು ತಾತ್ಕಾಲಿಕವಾಗಿ ಕೈಬಿಡಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಹೆಚ್.ವೈ ವಿಶ್ವರಾಧ್ಯ ತಿಳಿಸಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆರೋಗ್ಯ ಸಚಿವ ಶ್ರೀರಾಮುಲು ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಆರೋಗ್ಯ ಸಚಿವರ ನೇತೃತ್ವದಲ್ಲಿ ಬುಧವಾರ ನಡೆದ ಸಭೆಯಲ್ಲಿ ಸಂಘದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಒಂದು ತಿಂಗಳ ಸಮಯ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಒಂದು ತಿಂಗಳ ಕಾಲ ಮುಷ್ಕರ ಹಿಂದೆ ಪಡೆದಿದ್ದೇವೆ ಎಂದರು.
ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಎಲ್ಲ ನೌಕರರು ಇಂದಿನಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಮುಷ್ಕರದ ದಿನಗಳಲ್ಲಿ ಕಡಿತವಾದ ವೇತನ ಪಾವತಿಸಲು ಕ್ರಮ ಕೈಗೊಳ್ಳಲು ಹಾಗೂ ಮುಷ್ಕರದ ಸಮಯದಲ್ಲಿ ಸೇವೆಯಿಂದ ವಜಾಗೊಂಡಿರುವ ನೌಕರರಿಗೆ ನೋಟಿಸ್ ನೀಡಿರುವುದನ್ನು ಹಿಂಪಡೆಯಲು ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಹಾಗೆಯೇ ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ಒಂದು ತಿಂಗಳಲ್ಲಿ ನಮ್ಮ ಬೇಡಿಕೆ ಈಡೇರದಿದ್ದರೆ ಹೋರಾಟ ಅನಿವಾರ್ಯ ಎಂದು ತಿಳಿಸಿದರು.