ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪಂಚಾಯತ್ ಸದಸ್ಯರೂ ಆಗಿರುವ ಕೆ ಎಸ್ ಈಶ್ವರಪ್ಪ ಅವರ ಪುತ್ರ ಕೆ ಇ ಕಾಂತೇಶ್ ರಾಣೆಬೆನ್ನೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.
ಕಾಂತೇಶ್‌ನನ್ನು ಚುನಾವಣೆಗೆ ನಿಲ್ಲಿಸುವ ಯಾವ ಯೋಚನೆಯೂ ಇಲ್ಲ. ಫೇಸ್ ಬುಕ್ಗಳಲ್ಲಿ ಗ್ರೂಪ್ ಕ್ರಿಯೇಟ್ ಆಗಿರುವುದಕ್ಕೆ ನಾನು ಪ್ರತಿಕ್ರಿಯಿಸಲು ಆಗಲ್ಲ. ಕೆಲ ಕಾರ್ಯಕರ್ತರೂ ಇದನ್ನೇ ಮಾತನಾಡುತ್ತಿದ್ದಾರೆ. ಈ ಬಗ್ಗೆ ನಾನು ಉತ್ತರ ನೀಡುವುದಿಲ್ಲ ಎಂದು ಹೇಳಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಈಶ್ವರಪ್ಪ ಅವರು ಮಲ್ಲಿಕಾರ್ಜುನ ಖರ್ಗೆ ಅವರು ಮೈತ್ರಿ ಬೇಕು ಎನ್ನುತ್ತಿದ್ದಾರೆ. ಆದರೆ, ಉಳಿದ ಕಾಂಗ್ರೆಸ್ ನಾಯಕರು ಮೈತ್ರಿ ಬೇಡ ಎನ್ನುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮುಳುಗುವ ಹಡಗಾಗಿವೇ. ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ ಎಂದಾಕ್ಷಣ ಅವರು ಬಿಜೆಪಿಗೆ ಬರುತ್ತಾರೆ ಎಂದಲ್ಲ. ಸ್ನೇಹ ಬೇರೆ ರಾಜಕಾರಣ ಬೇರೆ ಎಂದು ಹೇಳಿದರು.
ಇನ್ನು, ಸಿದ್ದರಾಮಯ್ಯ ಅವರು ಹಿಂದೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗುವುದಿಲ್ಲ ಎಂದು ಹೇಳಿದ್ದರು. ಆದರೆ, 17 ಶಾಸಕರು ಬಿಜೆಪಿಗೆ ಬಂದರು. ಸಿದ್ದರಾಮಯ್ಯನವರಿಗೆ ರಾಜಕಾರಣದ ವಿದ್ಯಮಾನಗಳೇ ಗೊತ್ತಿಲ್ಲ ಎಂದು ಈಶ್ವರಪ್ಪ ಟಾಂಗ್ ನೀಡಿದರು.
ನಂತರದಲ್ಲಿ ಪ್ರವಾಹದ ಪರಿಹಾರದ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಜಲಪ್ರಳಯವಾಗಿದೆ. 1500 ಕೋಟಿ ರೂಪಾಯಿ ಬಿಡುಗಡೆ ಮಾಡಿ ರಸ್ತೆ ನಿರ್ಮಾಣ ಹಾಗೂ ಮನೆ ಕಟ್ಟಲು ಹಣ ನೀಡಲಾಗುತ್ತಿದೆ. ಮನೆ ನಿರ್ಮಾಣಕ್ಕೆ ಐದು ಲಕ್ಷ ರೂಪಾಯಿ ಅನುದಾನ ನೀಡುತ್ತೇವೆ. ದೇಶದ 12 ರಾಜ್ಯಗಳಲ್ಲಿ ನೆರೆ ಬಂದಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಬಂದು ಪರಿಶೀಲನೆ ನಡೆಸಿ ಹೋಗಿದ್ದಾರೆ. ಅವರು ಕೇಂದ್ರಕ್ಕೆ ವರದಿ ನೀಡಿದ್ದಾರೆ. ಆ ವರದಿ ಆಧರಿಸಿ ಕೇಂದ್ರ ಸರ್ಕಾರ ಹೆಚ್ಚಿನ ಪರಿಹಾರ ನೀಡಲಿದೆ ಎಂಬ ವಿಶ್ವಾಸವಿದೆ ಎಂದು ಕೆ ಎಸ್ ಈಶ್ವರಪ್ಪ ಹೇಳಿದರು.