ಶಿವಮೊಗ್ಗ: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರ ಜೀವ ವಿಮೆ ಮಾಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಚಾಣಕ್ಯ ಸೇನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸೆ. 21 ರಿಂದ ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಪ್ರಾರಂಭವಾಗುತ್ತಿವೆ. ಆದರೆ ತರಗತಿಗಳು ಪ್ರಾರಂಭವಾಗಲ್ಲ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. ಒಂದು ವೇಳೆ ಸೆ. 21 ರಿಂದ ಶಾಲಾ-ಕಾಲೇಜುಗಳು ಪ್ರಾರಂಭವಾದ್ರೆ ಸರ್ಕಾರಿ ಹಾಗೂ ಖಾಸಗಿ ಶಾಲೆ ಸೇರಿದಂತೆ ಪ್ರತಿಯೊಂದು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವೇ ಜೀವ ವಿಮೆ ಮಾಡಿಸಬೇಕು ಹಾಗೂ ವಿದ್ಯಾರ್ಥಿಗಳ ತಂದೆ ಅಥವಾ ತಾಯಿಯನ್ನು ನಾಮಿನಿಯನ್ನಾಗಿ ಮಾಡಬೇಕು. ಪ್ರತಿ ಶಾಲೆಯಲ್ಲೂ ಒಬ್ಬ ಶುಶ್ರೂಕಿಯನ್ನು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಗಾಗಿ ನೇಮಿಸಬೇಕು ಎಂದು ಒತ್ತಾಯಿಸಿದರು.
ಪ್ರತಿ ವಾರ ವೈದ್ಯಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಬೇಕು, ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಿಸಿಯೂಟ ಕಾರ್ಯಕರ್ತರಿಗೆ ಸಹ ಸರ್ಕಾರ ಜೀವ ವಿಮೆಯನ್ನು ಮಾಡಿಸಬೇಕು. ಹಾಗೂ ಪ್ರತಿ ಶಾಲೆಯಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಬೇಕು, ಒಂದು ಡೆಸ್ಕ್ ನಲ್ಲಿ ಇಬ್ಬರು ವಿದ್ಯಾರ್ಥಿಗಳು ಮಾತ್ರ ಕೂರುವಂತೆ ಸಾಮಾಜಿಕ ಅಂತರ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನವುದು ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.