ಶಿವಮೊಗ್ಗ : ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಫೆ.9ಕ್ಕೆ ಕೆಳದಿ ಶಿವಪ್ಪ ನಾಯಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಎಸ್. ಸಜ್ಜನ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕುವೆಂಪು ರಂಗಮಂದಿರದಲ್ಲಿ ಅಂದು ಬೆಳಗ್ಗೆ 10:30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. 5ನೇ ಬಾರಿಯ ಪ್ರಶಸ್ತಿಯನ್ನು ಅತೀ ವಿಶಿಷ್ಠ ಸೇವಾ ಪದಕ ಮತ್ತು ಪರಮ ವಿಶಿಷ್ಠ ಸೇವಾ ಪದಕ ಪುರಸ್ಕೃತರಾದ ಭಾರತೀಯ ಭೂಸೇನೆಯ ಲೆಫ್ಟಿನೆಂಟ್ ಜನರಲ್ ರಮೇಶ್ ಹಲಗಲಿ ಇವರಿಗೆ ನೀಡಲಾಗುತ್ತಿದೆ. 2018-19ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿದ 165 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಗುವುದು ಎಂದರು.
ಈ ಸಮಾರಂಭವನ್ನ ಸಿಎಂ ಯಡಿಯೂರಪ್ಪ ಉದ್ಘಾಟಿಸಲಿದ್ದು, ಮಹಾಸಭಾದ ಜಿಲ್ಲಾ ಘಟಕದ ಗೌರವ ಅಧ್ಯಕ್ಷರಾದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಕೆಳದಿ ಶಿವಪ್ಪನಾಯಕ ಪ್ರಶಸ್ತಿಯನ್ನು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಸಚಿವರು ಹಾಗೂ ಹಾಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಪ್ರದಾನ ಮಾಡಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ಜಿಲ್ಲಾ ಪ್ರ. ಕಾರ್ಯದರ್ಶಿ ಸಿ.ಮಹೇಶ್‌ಮೂರ್ತಿ, ಉಪಾಧ್ಯಕ್ಷ ಎಂ ಪಿ ಆನಂದ ಮೂರ್ತಿ, ಖಜಾಂಚಿ ಪಿ ಎಂ ರುದ್ರಮುನಿ, ನಿರ್ದೇಶಕರಾದ ಡಿ. ಪಾಲಾಕ್ಷಪ್ಪ, ಹೆಚ್ ಎಲ್ ನಿಂಗರಾಜ್, ಬಸವ ಕೇಂದ್ರದ ಅಧ್ಯಕ್ಷ ಜಿ. ಬೆನಕಪ್ಪ ಉಪಸ್ಥಿತರಿದ್ದರು.