ಶಿವಮೊಗ್ಗ: ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ನೂರಕ್ಕೆ ನೂರರಷ್ಟು ಗೆಲ್ಲುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಪಂಚಾಯತ್ ಆವರಣದಲ್ಲಿ ಮಾತನಾಡಿದ ಅವರು, ಎರಡೂ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗೂ ತೆರಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಯ ಬಗ್ಗೆ ತಿಳಿಸಿದ್ದಾರೆ. ಎರಡೂ ಸರ್ಕಾರಗಳ ಅಭಿವೃದ್ಧಿಗೆ ಬೆಂಬಲ ನೀಡಿ ಎಂದು ವಿನಂತಿಸಿಕೊಂಡಿದ್ದಾರೆ. ಇದರಿಂದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ ಎಂದರು.
ಮೊನ್ನೆ ನಡೆದ ನಾಲ್ಕು ಪರಿಷತ್ ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿಯ ಸಂಘಟನಾತ್ಮಕತೆಯಿಂದ ಹೆಚ್ಚಿನ ಮತದಾನವಾಗಿದೆ. ಇದರಿಂದ ಪರಿಷತ್ನ ನಾಲ್ಕು ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುತ್ತದೆ ಎಂದರು.
ರಾಜ್ಯಸಭೆಗೆ ಬಿಜೆಪಿಯಿಂದ ಅಭ್ಯರ್ಥಿಯ ಆಯ್ಕೆಯನ್ನು ಮಂಗಳೂರಿನಲ್ಲಿ ನಡೆಯುವ ರಾಜ್ಯದ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ನಡೆಸಲಾಗುವುದು. ಅಶೋಕ್ ಗಸ್ತಿ ಅವರ ಅಕಾಲಿಕ ಮರಣದಿಂದ ಅವರ ಸ್ಥಾನಕ್ಕೆ ಶೀಘ್ರದಲ್ಲೇ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದರು.