ಶಿವಮೊಗ್ಗ: 2021ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್ (ಎನ್‌ಐಆರ್‌ಎಫ್)ನಲ್ಲಿ ಕುವೆಂಪು ವಿಶ್ವವಿದ್ಯಾಲಯವು 81ನೇ ರ್ಯಾಂಕ್ಗಳಿಸುವುದರೊಂದಿಗೆ ಸತತ ನಾಲ್ಕನೇ ವರ್ಷ ದೇಶದ ಟಾಪ್ 100ರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ. ರಾಜ್ಯಗಳ ಸಾಂಪ್ರದಾಯಿಕ ವಿವಿಗಳ ಪೈಕಿ ಮೂರನೇ ಸ್ಥಾನ ಪಡೆದಿದೆ.
ದೇಶದ 4,100ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳು ಭಾಗವಹಿಸಿದ್ದ ಈ ರ‍್ಯಾಂಕಿಂಗ್ ಪಟ್ಟಿಯಲ್ಲಿ ಕುವೆಂಪು ವಿ.ವಿ. 40.40 ಅಂಕಗಳನ್ನು ಪಡೆಯುವ ಮೂಲಕ ಇಡೀ ದೇಶದ ವಿಶ್ವವಿದ್ಯಾಲಯಗಳ ಪೈಕಿ 81ನೇ ಸ್ಥಾನ ಪಡೆದಿದೆ. 2017ರಲ್ಲಿ 150ರಿಂದ 200ರ ವರ್ಗದಲ್ಲಿ ಸ್ಥಾನ ಪಡೆದಿದ್ದ ವಿಶ್ವವಿದ್ಯಾಲಯ, 2018ರಲ್ಲಿ ಭಾರಿ ಜಿಗಿತ ಕಂಡಿದ್ದು 78ನೇ ಸ್ಥಾನಕ್ಕೇರಿತ್ತು. ಪ್ರಸಕ್ತ ಸಾಲಿನಲ್ಲಿ 81ನೇ ರ‍್ಯಾಂಕ್ ಪಡೆಯುವುದರೊಂದಿಗೆ, ಕೋವಿಡ್-19 ಕಾರಣದಿಂದ ಉನ್ನತ ಶಿಕ್ಷಣದ ಚಟುವಟಿಕೆಗಳಿಗೆ ಹಿನ್ನೆಡೆಯಾಗಿದ್ದರೂ, ಟಾಪ್ 100ರೊಳಗೆ ಸ್ಥಾನ ಪಡೆದುಕೊಂಡಿದೆ.
ಕೇಂದ್ರೀಯ ವಿಶ್ವವಿದ್ಯಾಲಯಗಳು, ಕೇಂದ್ರ ಸರ್ಕಾರದ ಉನ್ನತ ಶೈಕ್ಷಣಿಕ ಸಂಸ್ಥೆಗಳು, ಎಂಜಿನಿಯರಿಂಗ್ ನಂತಹ ವೃತ್ತಿಪರ ಕೋರ್ಸ್ಗಳನ್ನು ನಡೆಸುವ ಖಾಸಗಿ ವಿಶ್ವವಿದ್ಯಾಲಯಗಳು, ಡೀಮ್ಡ್ ವಿಶ್ವವಿದ್ಯಾಲಯಗಳು ಸೇರಿದಂತೆ ದೇಶಾದ್ಯಂತ (4100) ಶಿಕ್ಷಣ ಸಂಸ್ಥೆಗಳು ಶ್ರೇಣೀಕರಣಕ್ಕೆ ಒಳಪಟ್ಟಿವೆ. ಕರ್ನಾಟಕದ ವಿಶ್ವವಿದ್ಯಾಲಯಗಳ ಪೈಕಿ ಮೈಸೂರು ವಿಶ್ವವಿದ್ಯಾಲಯ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಕ್ರಮವಾಗಿ 91 ಮತ್ತು 69ನೇ ರ‍್ಯಾಂಕ್ ಪಡೆಯುವುದರೊಂದಿಗೆ ರಾಜ್ಯಮಟ್ಟದಲ್ಲಿ ಮೊದಲೆರಡು ಸ್ಥಾನ ಪಡೆದಿವೆ.
ದೇಶದ ಶೈಕ್ಷಣಿಕ ಸಂಸ್ಥೆಗಳ ಗುಣಮಟ್ಟವನ್ನು ಉತ್ತಮಪಡಿಸಲು ಮತ್ತು ಒಟ್ಟಾರೆ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ 2015ರಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎನ್‌ಐಆರ್‌ಎಫ್ ರ‍್ಯಾಂಕಿಂಗ್ ಪ್ರಾರಂಭಿಸಿದ್ದು, ಈಗ ಆರನೇ ಆವೃತ್ತಿಯನ್ನು ಬಿಡುಗಡೆಗೊಳಿಸಿದೆ. ಎಂಜಿನಿಯರಿಂಗ್, ಮ್ಯಾನೇಜ್‌ಮೆಂಟ್, ವೈದ್ಯಕೀಯ, ವಾಸ್ತುಶಿಲ್ಪ, ಕಾನೂನು ವಿಷಯಗಳ ಶಿಕ್ಷಣ ಸಂಸ್ಥೆಗಳ ಜೊತೆಗೆ ವಿಶ್ವವಿದ್ಯಾಲಯಗಳ ಶ್ರೇಣೀಕರಣವನ್ನು ಎನ್‌ಐಆರ್‌ಎಫ್ ಅಡಿಯಲ್ಲಿ ಮಾನವ ಸಂಪನ್ಮೂಲ ಇಲಾಖೆ ಪ್ರತಿ ವರ್ಷ ಕೈಗೊಳ್ಳುತ್ತದೆ.
ವಿಶ್ವವಿದ್ಯಾಲಯದ ರ‍್ಯಾಂಕಿಂಗ್ ಬಗ್ಗೆ ಪ್ರತಿಕ್ರಿಯಿಸಿರುವ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕೋವಿಡ್-19ನಂತಹ ಮಹಾಮಾರಿಯು ದೇಶದ ಶೈಕ್ಷಣಿಕ ರಂಗವನ್ನು ತೀವ್ರವಾಗಿ ಭಾಧಿಸುತ್ತಿದ್ದರೂ, ವಿಶ್ವವಿದ್ಯಾಲಯದ ಅಧ್ಯಾಪಕರು ಗುಣಮಟ್ಟದ ಸಂಶೋಧನೆ, ಪ್ರಕಟಣೆ ಮತ್ತು ವಿಸ್ತರಣಾ ಚಟುವಟಿಕೆಗಳನ್ನು ಮುಂದುವರೆಸಿರುವುದರ ಮೂಲಕ ಶೈಕ್ಷಣಿಕ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಮುಂಬರುವ ದಿನಗಳಲ್ಲಿ ರ‍್ಯಾಂಕಿಂಗ್ ಉತ್ತಮಪಡಿಸುವ ನಿಟ್ಟಿನಲ್ಲಿ ಸರ್ವಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಕುಲಸಚಿವರಾದ ಜಿ. ಅನುರಾಧ ಪ್ರತಿಕ್ರಿಯಿಸಿ, ದೇಶದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳೊಂದಿಗೆ ಸ್ಪರ್ಧಿಸಿ ಗ್ರಾಮೀಣ ಭಾಗದ ಸರ್ಕಾರಿ ಸಂಯೋಜಿತ ವಿಶ್ವವಿದ್ಯಾಲಯವೊಂದು ಸತತ ನಾಲ್ಕು ವರ್ಷಗಳಿಂದ ನೂರರ ಪಟ್ಟಿಯೊಳಗೆ ಸ್ಥಾನ ಪಡೆಯುತ್ತಾ ಬಂದಿರುವುದು ಒಟ್ಟಾರೆ ವಿಶ್ವವಿದ್ಯಾಲಯದ ಶೈಕ್ಷಣಿಕ ಗುಣಮಟ್ಟವನ್ನು ಪ್ರತಿಬಿಂಬಿಸುತ್ತದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ನೀಡುತ್ತಿರುವುದಕ್ಕೆ ರಾಷ್ಟ್ರಮಟ್ಟದ ಮನ್ನಣೆ ಲಭಿಸಿರುವುದು ಸಂತಸದ ವಿಷಯ ಎಂದಿದ್ದಾರೆ.
ಎನ್‌ಐಆರ್‌ಎಫ್ ರ‍್ಯಾಂಕಿಂಗ್ ಮಾನದಂಡಗಳು: ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್ ಫ್ರೇಂವರ್ಕ್ ಐದು ಪ್ರಮುಖ ಮಾನದಂಡಗಳ ಆಧಾರದ ಮೇಲೆ ಶ್ರೇಣೀಕರಣ ನೀಡುತ್ತದೆ. ರ‍್ಯಾಂಕಿಂಗ್‌ಗೆ ಒಳಪಡುವ ಶೈಕ್ಷಣಿಕ ಸಂಸ್ಥೆಗಳಲ್ಲಿನ ಬೋಧನೆ, ಕಲಿಕೆಗಾಗಿ ಅಸ್ತಿತ್ವದಲ್ಲಿರುವ ಸಂಪನ್ಮೂಲಗಳ ಸೌಲಭ್ಯ, ಸಂಸ್ಥೆಗಳಲ್ಲಿ ನಡೆಯುತ್ತಿರುವ ಸಂಶೋಧನೆ ಮತ್ತು ವೃತ್ತಿಪರ ಚಟುವಟಿಕೆಗಳು, ಕೋರ್ಸ್ಗಳ ಮೂಲಕ ಸಂಸ್ಥೆ ಸೃಷ್ಟಿಸುತ್ತಿರುವ ಉದ್ಯೋಗಾವಕಾಶ ಮತ್ತು ಪರೀಕ್ಷೆಯ ಉತ್ತೀರ್ಣದ ಪ್ರಮಾಣ ಸೇರಿದಂತೆ ಉನ್ನತ ಶಿಕ್ಷಣದ ಫಲಿತಾಂಶ, ಶೈಕ್ಷಣಿಕ ಸಂಸ್ಥೆಯ ಮೂಲಕ ನಡೆಯುತ್ತಿರುವ ವಿಸ್ತರಣೆ ಮತ್ತು ಸಾಮಾಜಿಕ ಒಳಗೊಳ್ಳುವಿಕೆಯ ಚಟುವಟಿಕೆಗಳು ಮತ್ತು ಸಂಸ್ಥೆಯ ಕುರಿತು ಸಿಬ್ಬಂದಿ, ಸಂಶೋಧಕರು, ಸಾರ್ವಜನಿಕರ ಗ್ರಹಿಕೆ ಮತ್ತು ಅಭಿಪ್ರಾಯ, ಈ ಐದು ಮಾನದಂಡಗಳ ಮೂಲಕ ಮೌಲ್ಯಮಾಪನ ಮಾಡಿ ಶ್ರೇಣೀಕರಣ ನೀಡಲಾಗುತ್ತದೆ.
ರಾಜ್ಯದ ಉನ್ನತ ಶಿಕ್ಷಣದ ಶೈಕ್ಷಣಿಕ ಸಂಸ್ಥೆಗಳ ಪೈಕಿ ಕುವೆಂಪು ವಿಶ್ವವಿದ್ಯಾಲಯ 7ನೇ ಸ್ಥಾನ ಪಡೆದಿದೆ. ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (1), ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (7), ಮೈಸೂರು ವಿಶ್ವವಿದ್ಯಾಲಯ (19), ಮೈಸೂರಿನ ಜೆ.ಎಸ್.ಎಸ್. ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆ್ಯಂಡ್ ರಿಸರ್ಚ್ (34), ಬೆಂಗಳೂರು ವಿಶ್ವವಿದ್ಯಾಲಯ (69), ಮಂಗಳೂರಿನ ನಿಟ್ಟೆ ತಾಂತ್ರಿಕ ವಿಶ್ವವಿದ್ಯಾಲಯ (77) ಸ್ಥಾನ ಪಡೆದಿವೆ. ಇನ್ನುಳಿದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (82), ಬೆಳಗಾವಿಯ ಕೆಎಲ್‌ಈ ಸಂಸ್ಥೆ (91) ಮತ್ತು ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯ (99) ಟಾಪ್ 100ರಲ್ಲಿರುವ ಕರ್ನಾಟಕದ ಇತರೆ ಶೈಕ್ಷಣಿಕ ಸಂಸ್ಥೆಗಳು.