ಶಿವಮೊಗ್ಗ: ನಗರದ ಅಣ್ಣಾ ಹಜಾರೆ ಹೋರಾಟ ಸಮಿತಿಯ ಪದಾಧಿಕಾರಿಗಳನ್ನು ನಿಂದಿಸಿ ಜೀವ ಬೆದರಿಕೆ ಹಾಕಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಹಾಗೂ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ, ಅಣ್ಣಾ ಹಜಾರೆ ಹೋರಾಟ ಸಮಿತಿ ಮತ್ತು ಶರಾವತಿ ನಗರ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಆ.12 ರಂದು ಬೆಳಗ್ಗೆ 10 ಗಂಟೆಗೆ ನಗರದ ಆದಿಚುಂಚನಗಿರಿ ಶಾಲಾ ಮುಂಭಾಗದಲ್ಲಿ ಸ್ಮಾರ್ಟ್ ಸಿಟಿಗೆ ಸಂಬಂಧಿಸಿದ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿಯಲ್ಲಿ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ ಈ ಲೋಪದೋಷಗಳ ಪರಿಶೀಲನೆಗಾಗಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಸ್ಮಾರ್ಟ್‌ಸಿಟಿ ಅಧಿಕಾರಿಗಳು ಬರುವ ನಿರೀಕ್ಷೆಯಲ್ಲಿದ್ದ ಸಂದರ್ಭದಲ್ಲಿ ಅಣ್ಣಾಹಜಾರೆ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಟಿ.ಎಂ. ಅಶೋಕ ಯಾದವ್ ಅವರಿಗೆ ಕೆಲವು ರಾಜಕೀಯ ವ್ಯಕ್ತಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆಂದು ಮನವಿದಾರರು ದೂರಿದರು.
ಶರಾವತಿ ನಗರ ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಗದೀಶ್‌ರನ್ನು ತಳ್ಳಿ, ಎಳೆದಾಡಿ ದೈಹಿಕವಾಗಿ ಹಲ್ಲೆ ಮಾಡಲಾಗಿದೆ. ಅಲ್ಲದೆ, ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಸಂತ ಕುಮಾರ್ ವಿರುದ್ಧ ಕೂಡ ಘೋಷಣೆಗಳನ್ನು ಕೂಗಿ ಅವರ ಗೌರವಕ್ಕೆ ಧಕ್ಕೆ ಉಂಟು ಮಾಡಿದ್ದಾರೆ. ಈ ಎಲ್ಲಾ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.