ಶಿವಮೊಗ್ಗ: 2019ರ ಲೋಕಸಭಾ ಸಾರ್ವಜನಿಕ ಚುನಾವಣೆಯ ಪ್ರಚಾರವನ್ನು ಬಿಜೆಪಿ ಹಾಗೂ ಮೈತ್ರಿ ಪಕ್ಷಗಳ ಅಭ್ಯರ್ಥಿಗಳು ಪ್ರತ್ಯೇಕವಾಗಿ ತಮ್ಮದೇ ರೀತಿಯಲ್ಲಿ ಪ್ರಾರಂಭಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಿನ್ನೆ ಪಕ್ಷ ಅಧಿಕೃತವಾಗಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ ನಂತರ ತಮ್ಮ ತವರು ಕ್ಷೇತ್ರ ಶಿಕಾರಿಪುರ ತಾಲೂಕಿನಲ್ಲಿ ಪ್ರಚಾರ ಪ್ರಾರಂಭಿಸಿದ್ದಾರೆ. ಇಲ್ಲಿನ ಶಿರಾಳಕೊಪ್ಪ, ತೂಗರ್ಸಿ ಹಾಗೂ ಸುಣ್ಣದಕೊಪ್ಪ ಸೇರಿದಂತೆ ಸುತ್ತಮುತ್ತಲ ಕಾರ್ಯಕರ್ತರ ಜತೆಗೆ ಸಭೆ ನಡೆಸಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಮಧುಬಂಗಾರಪ್ಪ ಹೊಸನಗರ ಪಟ್ಟಣದ ಬ್ರಾಹ್ಮಣ ಸಮುದಾಯದ ಭವನಲ್ಲಿ ಕೈ-ದಳ ಕಾರ್ಯಕರ್ತರ ಸಭೆ ನಡೆಸಿದರು. ಹೊಸನಗರ, ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿದ್ದು, ಇಲ್ಲಿನ ಕಾರ್ಯಕರ್ತರ ಸಭೆ ನಡೆಸಿ, ತಮಗೆ ಮತಯಾಚನೆ ಮಾಡುವಂತೆ ವಿನಂತಿ ಮಾಡಿಕೊಂಡರು. ಜಂಟಿ ಸಭೆಯಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್, ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಸೇರಿದಂತೆ ಹಲವು ಚುನಾಯಿತ ಪ್ರತಿನಿಧಿಗಳು ಭಾಗಿಯಾದ್ದರು.