ಶಿವಮೊಗ್ಗ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಹತ್ತು ವರ್ಷ ಜೈಲು ಹಾಗೂ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ಪೋಕ್ಸೋ ನ್ಯಾಯಾಲಯ ಆದೇಶ ನೀಡಿದೆ. ಅಪ್ರಾಪ್ತೆ ಮೇಲೆ 2019ರಲ್ಲಿ ಅತ್ಯಾಚಾರ ಎಸಗಿದ್ದ ಮನ್ಸೂರ್ ಎಂಬ ವ್ಯಕ್ತಿಗೆ ಶಿಕ್ಷೆ ನೀಡಲಾಗಿದೆ. ಆರೋಪಿಯು ದಂಡದ ಮೊತ್ತ ಪಾವತಿಸದಿದ್ದಲ್ಲಿ ಆರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಮನ್ಸೂರ್ 2019ರಲ್ಲಿ 16 ವರ್ಷದ ಅಪ್ರಾಪ್ತೆಯನ್ನು ಮನೆಗೆ ಟಿವಿ ನೋಡುವ ನೆಪದಲ್ಲಿ ಕರೆದು ಆಕೆ ಮೇಲೆ ಅತ್ಯಾಚಾರ ಎಸಗಿದ್ದ. ಜೊತೆಗೆ ಬಾಲಕಿಗೆ ಜೀವ ಬೆದರಿಕೆ ಹಾಕಿದ್ದಲ್ಲದೆ, ಬೀಡಿಯಿಂದ ಆಕೆಯ ಬಲಗೈ ಸುಟ್ಟಿದ್ದ. ಈ ಬಗ್ಗೆ 2019ರಲ್ಲಿ ಶಿವಮೊಗ್ಗ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದ ಪೊಲೀಸ್ ಅಧಿಕಾರಿ ಅಭಯ ಪ್ರಕಾಶ್ ಸೋಮನಾಳ್, ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ದಯಾನಂದ್, ಆರೋಪಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸತೀಶ್ ವಾದ ಮಂಡಿಸಿದ್ದರು.