ಶಿವಮೊಗ್ಗ: ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ವತಿಯಿಂದ ಮಾಸ್ಕ್ ಡೇ ಜಾಥಾಗೆ ಸಚಿವ ಕೆ.ಎಸ್ ಈಶ್ವರಪ್ಪ ಚಾಲನೆ ನೀಡಿದರು.
ನಗರದ ಪ್ರಮುಖ ಬೀದಿಗಳಲ್ಲಿ ಜಿಲ್ಲಾಧಿಕಾರಿ ಸೇರಿ ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಸಚಿವ ಕೆ.ಎಸ್ ಈಶ್ವರಪ್ಪ ಮಾಸ್ಕ್ ಡೇ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ ಅವರು ಕೊರೊನಾ ವೈರಸ್ ದೂರ ಮಾಡಲು ಸರ್ಕಾರದ ಜೊತೆಗೆ ಪ್ರತಿಯೊಬ್ಬರು ಸಹಕರಿಸುವುದು ಬಹಳ ಮುಖ್ಯ. ಒಬ್ಬ ವ್ಯಕ್ತಿಗೆ ಸೋಂಕು ಹರಡುವುದರಿಂದ ಅವರ ಕುಟುಂಬ ಹಾಗೂ ಸಮಾಜ ಕೂಡ ಹಾಳಾಗುತ್ತದೆ ಎಂಬ ಭಾವನೆ ಇಟ್ಟುಕೊಳ್ಳದೆ ಹೋದರೆ ಕೊರೊನಾ ದೂರ ಮಾಡುವುದು ಸಾಧ್ಯವಿಲ್ಲ. ಹಾಗಾಗಿ ಎಲ್ಲರೂ ಸರ್ಕಾರದ ಜೊತೆ ಸಹಕರಿಸಬೇಕು ಎಂದರು.
ಕೊರೊನಾ ನಿಯಂತ್ರಿಸುವುದಲ್ಲಿ ಬೇರೆ ದೇಶಕ್ಕೆ ಹೋಲಿಸಿದರೆ ನಮ್ಮ ದೇಶ,ರಾಜ್ಯ, ಜಿಲ್ಲೆ ಮುಂದಿದೆ ಎಂದು ತಿಳಿಸಿದರು. ಹಾಗಾಗಿ ಪ್ರತಿಯೊಬ್ಬರು ಮಾಸ್ಕ್ ಗಳನ್ನು ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಠಾರೆ, ಅಪರ ಜಿಲ್ಲಾಧಿಕಾರಿ ಜಿ ಅನುರಾಧ ಉಪಸ್ಥಿತರಿದ್ದರು.