ಶಿವಮೊಗ್ಗ : ಪಕ್ಷ ಬೆಳೆದಂತೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.
ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆಯ ಕುರಿತು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿ ಎನ್ನುತ್ತಿದಂತೆ ನಾವು ಗೆಲ್ತೀವಿ ಅನ್ನೋ ವಿಶ್ವಾಸ ಕಾರ್ಯಕರ್ತರಲ್ಲಿ ಬರುತ್ತದೆ.
ಆದ್ದರಿಂದ ಅತಿ ಹೆಚ್ಚು ಕಾರ್ಯಕರ್ತರು ಟಿಕೆಟ್ಗಾಗಿ ಅಪೇಕ್ಷೆ ಪಡುತ್ತಿದ್ದಾರೆ. ನಾಳೆ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಕೋರ್ ಕಮಿಟಿ ಮೀಟಿಂಗ್ ಮಾಡಿ ಯಾರು ಅಭ್ಯರ್ಥಿ ಎನ್ನುವುದನ್ನು ಘೋಷಣೆ ಮಾಡುತ್ತೇವೆ ಎಂದರು.
ಮತಾಂತರ ತಡೆಯುವ ನಿಟ್ಟಿನಲ್ಲಿ ಕ್ರಮ : ಇತ್ತೀಚಿನ ದಿನಗಳಲ್ಲಿ ಮತಾಂತರ ಹೆಚ್ಚಾಗುತ್ತಿದೆ. ಮತಾಂತರ ತಡೆಯುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ. ಅದಕ್ಕಾಗಿಯೇ ಬಿಲ್ ಕೂಡ ಪಾಸ್ ಆಗಿದೆ. ಬಡತನವನ್ನು ದುರ್ಬಳಕೆ ಮಾಡಿಕೊಂಡು ಮತಾಂತರ ಮಾಡುತ್ತಿರುವುದನ್ನು ನಾವು ಕಾಣುತ್ತಿದ್ದೇವೆ.
ಮತಾಂತರ ಮಾಡುವವರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮಕೈಗೊಂಡು ಮತಾಂತರ ಆಗದಂತೆ ತಡೆಯುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದರು.