ಶಿವಮೊಗ್ಗ: 75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ನಗರದ ಪೊಲೀಸ್ ಡಿಎಆರ್ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಭಾಗಿಯಾಗಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸ್ ಪಡೆಗಳಿಂದ ಉಸ್ತುವಾರಿ ಸಚಿವರು ಗೌರವ ವಂದನೆ ಸ್ವೀಕರಿಸಿದರಲ್ಲದೇ, ಪಥ ಸಂಚಲನವನ್ನು ಸಹ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಚಟುವಟಿಕೆಗಳಿಗೆ ಇನ್ನಷ್ಟು ವೇಗ ದೊರೆಯುವ ಪೂರ್ಣ ವಿಶ್ವಾಸ ನನಗಿದೆ. ಪ್ರಸ್ತುತ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ, ಇನ್ನಷ್ಟು ಜನಪರ ಚಟುವಟಿಕೆಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ನಾವು ಕಾರ್ಯಪ್ರವೃತ್ತರಾಗಿದ್ದೇವೆ ಎಂದರು.
ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದ ನಡುವೆಯೂ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಂಡಿರುವುದು ನಮ್ಮ ಹಿರಿಮೆ. ನಮ್ಮೆಲ್ಲರ ಭವಿಷ್ಯವನ್ನು ಸುಂದರಗೊಳಿಸುವ ಅಭಿವೃದ್ಧಿ ಕಾಮಗಾರಿಗಳು ನಿರ್ವಿಘ್ನವಾಗಿ ಮುಂದುವರೆದಿವೆ. ಕಳೆದ ಎರಡು ವರ್ಷಗಳಲ್ಲಿ ಗ್ರಾಮೀಣಾಭಿವೃದ್ಧಿಯಲ್ಲಿ ಹೊಸ ಶಕೆ ಆರಂಭವಾಗಿದೆ. ಗ್ರಾಮೀಣ ಭಾಗದ ಜಲಮೂಲಗಳಿಗೆ ಪುನರ್ ಜನ್ಮ ನೀಡುವ ಜಲಾಮೃತ ಯೋಜನೆ, ಪ್ರತಿ ಗ್ರಾಮ ಪಂಚಾಯತ್‍ಗಳಲ್ಲಿ ಘನತ್ಯಾಜ್ಯ ಸಂಕೀರ್ಣ ಸ್ಥಾಪನೆ, ಪ್ರತಿಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಮನೆ ಮನೆ ಗಂಗೆ, ಗ್ರಾಮೀಣ ರಸ್ತೆ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳ ಮೂಲಕ ಗ್ರಾಮೀಣ ಜನತೆಯ ಬದುಕನ್ನು ಹಸನುಗೊಳಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇರಿಸಲಾಗಿದೆ ಎಂದು ತಿಳಿಸಿದರು.
'ಜನರ ಯೋಜನೆ’ ಜಾರಿ: ಗ್ರಾಮೀಣ ಜನರ ಬದುಕನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಐದು ವರ್ಷಗಳಿಗೆ ಅನ್ವಯವಾಗುವಂತೆ 'ಜನರ ಯೋಜನೆ’ ರೂಪಿಸಲಾಗುತ್ತಿದೆ. ಗ್ರಾಮ ಪಂಚಾಯತ್‍ಗಳಲ್ಲಿ ಜನರ ಸ್ಥಳೀಯ ಬೇಡಿಕೆಗಳಿಗೆ ಅನುಗುಣವಾಗಿ ಯೋಜನೆಗಳನ್ನು ರೂಪಿಸಿ ಐದು ವರ್ಷಗಳ ಅವಧಿಯಲ್ಲಿ ಹಂತ ಹಂತವಾಗಿ ಕಾರ್ಯರೂಪಕ್ಕೆ ತರುವುದು ಇದರ ಉದ್ದೇಶವಾಗಿದೆ ಎಂದರು.
ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅನುಷ್ಟಾನದಲ್ಲಿ ದೇಶದಲ್ಲಿಯೇ ಮೊದಲನೇ ಸ್ಥಾನದಲ್ಲಿದ್ದೇವೆ. ಗ್ರಾಮೀಣ ಪ್ರದೇಶದಲ್ಲಿ ಯಾರಾದರೂ ಕೆಲಸ ಮಾಡಲು ಮುಂದೆ ಬಂದರೆ ತಕ್ಷಣ ಉದ್ಯೋಗ ಕಾರ್ಡ್ ಮಾಡಿಸಿ ಉದ್ಯೋಗ ನೀಡಲಾಗುತ್ತಿದೆ. ಉದ್ಯೋಗ ಖಾತ್ರಿ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಆಸ್ತಿ ಮಾತ್ರವಲ್ಲದೆ ಸಣ್ಣ ರೈತರಿಗೂ ಶಾಶ್ವತ ಆಸ್ತಿಯನ್ನು ಸೃಜಿಸಲು ಸಾಧ್ಯವಾಗಿದೆ. 2019-20ರಲ್ಲಿ 32 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದ್ದು, ಕಳೆದ ವರ್ಷ 41 ಲಕ್ಷ ದಿನಗಳನ್ನು ಸೃಜಿಸಲಾಗಿದೆ. 1.12 ಲಕ್ಷ ಕುಟುಂಬಗಳಿಗೆ ಉದ್ಯೋಗ ಒದಗಿಸಲು ನಮಗೆ ಸಾಧ್ಯವಾಗಿದೆ. ಜಿಲ್ಲಾ ಪಂಚಾಯತ್ ಕೆರೆಗಳನ್ನು ಗ್ರಾಮ ಪಂಚಾಯತ್‍ಗಳಿಗೆ ಹಸ್ತಾಂತರಿಸಲಾಗಿದ್ದು, ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಎಲ್ಲಾ ಕೆರೆಗಳನ್ನು ಅಭಿವೃದ್ಧಿ ಪಡಿಸುವ ಯೋಜನೆಯನ್ನು ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕಳೆದ ಎರಡು ವರ್ಷಗಳಲ್ಲಿ ಜಿಲ್ಲೆಯಲ್ಲಿ ರಸ್ತೆ, ಸೇತುವೆಗಳು, ವಿಮಾನ ನಿಲ್ದಾಣ, ರೈಲ್ವೆ ಮಾರ್ಗಗಳು, ನೀರಾವರಿ ಯೋಜನೆಗಳು, ಪ್ರವಾಸೋದ್ಯಮ, ಗ್ರಾಮೀಣಾಭಿವೃದ್ಧಿ ಚಟುವಟಿಕೆಗಳು, ಕೆರೆಗಳ ಅಭಿವೃದ್ಧಿ ಸೇರಿದಂತೆ ಹತ್ತು ಹಲವು ಕ್ಷೇತ್ರಗಳಲ್ಲಿ ಮಹತ್ತರ ಮೈಲಿಗಲ್ಲುಗಳನ್ನು ಸಾಧಿಸಲಾಗಿದೆ. ಹಿಂದೆಂದೂ ಕಂಡರಿಯದ ಅಭಿವೃದ್ಧಿ ಚಟುವಟಿಕೆಗಳಿಗೆ ಜಿಲ್ಲೆಯ ಜನತೆ ಸಾಕ್ಷಿಯಾಗಿದ್ದಾರೆ ಎಂದು ಹೇಳಿದರು.
ಯುವಕರಿಗೆ ರಾಯಣ್ಣ ಸ್ಫೂರ್ತಿ : ಕಾರ್ಮಿಕ ರಕ್ಷಣಾ ವೇದಿಕೆ ವತಿಯಿಂದ ನಗರದ ಶಿವಪ್ಪನಾಯಕನ ವೃತ್ತದಲ್ಲಿ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಹೆಸರು ಕೇಳುತ್ತಿದ್ದಂತೆ ಯುವಕರಿಗೆ ದೇಶಭಕ್ತಿ, ಹುಮ್ಮಸ್ಸು ಮೂಡುತ್ತದೆ. ಅಂತಹ ವ್ಯಕ್ತಿ ಸಂಗೊಳ್ಳಿ ರಾಯಣ್ಣ. ಅವರು ಹುಟ್ಟಿದ ದಿನವೇ ಸ್ವಾತಂತ್ರ್ಯ ಸಿಕ್ಕಿರುವುದು ಎಲ್ಲರೂ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.