ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಯುಷ್ ಔಷಧಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಇಲಾಖೆ ಮುಂದಾಗಬೇಕೆಂದು ಸಚಿವ ಕೆ.ಎಸ್..ಈಶ್ವರಪ್ಪ ಹೇಳಿದರು.
ಶಿವಮೊಗ್ಗದ ತಮ್ಮ ಕಚೇರಿಯಲ್ಲಿ ಆಯುಷ್ ಇಲಾಖೆಯ ವೈದ್ಯರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಮನುಷ್ಯರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಆಯುಷ್ ಇಲಾಖೆ ಮುಂದಾಗಬೇಕು ಎಂದರು.
ಜೊತೆಗೆ ಆಯುರ್ವೇದ ಔಷಧವು ಕೊರೊನಾದಂತಹ ಮಹಾಮಾರಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಮಾಹಿತಿ ಇದೆ. ಆದ್ದರಿಂದ ಆಯುಷ್ ಇಲಾಖೆ ಇಂತಹ ಸಂದಿಗ್ಧ ಸಂದರ್ಭದಲ್ಲಿ ಜನಸಾಮಾನ್ಯರಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ತಮ್ಮ ವಿಭಾಗದ ಔಷಧಗಳನ್ನು ವಿತರಿಸಬೇಕು ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಆಯುಷ್ ಅಧಿಕಾರಿ ಡಾ. ಪುಷ್ಪಾ ಮಾತನಾಡಿ, ಈಗಾಗಲೇ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಪಂ ಮಟ್ಟದಲ್ಲಿ ನಮ್ಮ ಇಲಾಖೆ ವತಿಯಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಔಷಧಿಗಳನ್ನು ವಿತರಿಸಲಾಗುತ್ತಿದೆ. ಇದೇ ಕಾರ್ಯವನ್ನು ಬೇರೆ ಬೇರೆ ಹಂತದಲ್ಲಿಯೂ ಕೂಡಾ ಮಾಡಲು ಯೋಜನೆ ರೂಪಿಸಿ, ಶೀಘ್ರದಲ್ಲೇ ಅದನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು.