ಶಿವಮೊಗ್ಗ: ನಗರದಲ್ಲಿ ಹೊಸದಾಗಿ ಇನ್ನೊಂದು ಕೇಂದ್ರೀಯ ವಿದ್ಯಾಲಯವನ್ನು ಈ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ನಗರಕ್ಕೆ ಇನ್ನೊಂದು ಕೇಂದ್ರೀಯ ವಿದ್ಯಾಲಯ ಮಂಜೂರು ಮಾಡಲು ಕೇಂದ್ರ ಮಾನವ ಸಂಪನ್ಮೂಲ ಸಚಿವರಿಗೆ ಮನವಿ ಮಾಡಲಾಗಿತ್ತು. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವಿದ್ಯಾಲಯ ಆರಂಭಿಸುವ ಕುರಿತು ಪರಿಶೀಲನೆಗಾಗಿ ಹಿರಿಯ ಅಧಿಕಾರಿಗಳು ಮಂಗಳವಾರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.
ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಕೇಂದ್ರೀಯ ವಿದ್ಯಾಲಯ ಕಾರ್ಯಾರಂಭ ಮಾಡಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಿದೆ. ತಾತ್ಕಾಲಿಕವಾಗಿ ನಗರದ ರಾಗಿ ಗುಡ್ಡದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತರಗತಿಯನ್ನು ಆರಂಭಿಸಲು ನಿರ್ಧರಿಸಲಾಗಿದೆ. ಹೊಸ ಕೇಂದ್ರೀಯ ವಿದ್ಯಾಲಯಕ್ಕೆ ತ್ಯಾವರೆ ಚಟ್ನಳ್ಳಿಯಲ್ಲಿ 5 ಎಕರೆ ಸ್ಥಳವನ್ನು ಗುರುತಿಸಲಾಗಿದ್ದು, ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಮುಂದಿನ ವರ್ಷದಿಂದ ಇಲ್ಲಿ ವಿದ್ಯಾಲಯ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು.
ಜಿಲ್ಲೆಯಲ್ಲಿ ಡಿಆರ್ಡಿಒ ಲ್ಯಾಬ್ ಆರಂಭಿಸುವ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಭದ್ರಾವತಿಯಲ್ಲಿ ಕೇಂದ್ರೀಯ ವಿದ್ಯಾಲಯ, ಸುಸಜ್ಜಿತ ಕ್ರೀಡಾಂಗಣ ನಿರ್ಮಿಸುವ ಘೋಷಣೆಯನ್ನು ಮಾಡಿದ್ದಾರೆ ಎಂದು ಹೇಳಿದರು.