ಶಿವಮೊಗ್ಗ: ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಕೊರೊನಾ ಪಾಸಿಟಿವ್ ಕೇಸ್ಗಳು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಇದುವರೆಗೂ 291 ಕೊರೊನಾ ಶಂಕಿತರು ಮನೆಯಲ್ಲಿ ಹೋಂ ಕ್ವಾರಂಟೈನ್ನಲ್ಲಿದ್ದಾರೆ. 230 ಜನ ಶಂಕಿತರು ಮನೆಯಲ್ಲೇ ಇದ್ದು 14 ದಿನ ಮುಗಿಸಿದ್ದಾರೆ. 74 ಜನ ಶಂಕಿತರಲ್ಲಿ 14 ಶಂಕಿತರು ಹೋಂ ಕ್ವಾರಂಟೈನ್ ಮುಗಿಸಿದ್ದಾರೆ. ಸದ್ಯ 4 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 26 ಕೊರೊನಾ ರಕ್ತ ಪರೀಕ್ಷೆಯಲ್ಲಿ ಎಲ್ಲವೂ ನೆಗೆಟಿವ್ ಬಂದಿದೆ ಎಂದು ತಿಳಿಸಿದರು.
ಕೊರೊನಾ ಹರಡದಂತೆ ತಡೆಯಲು ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯನ್ನು ಸಂಪೂರ್ಣ ಲಾಕ್‍ಡೌನ್ ಮಾಡಲಾಗಿದ್ದು, ಈ ಅವಧಿಯಲ್ಲಿ ಅಂಗಡಿಗಳಲ್ಲಿ ಹಾಲು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟ ಎಂದಿನಂತೆ ಇರಲಿದೆ. ಇಂದಿನಿಂದ ಮಾ. 31ರವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ಘೋಷಿಸಲಾಗಿದೆ. ಐದಕ್ಕಿಂತ ಹೆಚ್ಚು ಜನರು ಸೇರುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲು ಸೂಚಿಸಲಾಗಿದೆ. ಜನರು ಒಟ್ಟಾಗಿ ಸೇರುವಂತಹ ಮಾರುಕಟ್ಟೆ ಪ್ರದೇಶಗಳನ್ನು ಮುಚ್ಚಲು ಆದೇಶಿಸಲಾಗಿದೆ. ಇದೇ ರೀತಿ ಅಗತ್ಯ ವಸ್ತುಗಳು, ದಿನಸಿ ಸಾಮಗ್ರಿ ಇತ್ಯಾದಿ ಅಂಗಡಿಗಳನ್ನು ಹೊರತುಪಡಿಸಿ ಬೇರೆಲ್ಲಾ ಅಂಗಡಿಗಳನ್ನು ಸಂಪೂರ್ಣವಾಗಿ ಮುಚ್ಚಲು ಆದೇಶಿಸಲಾಗಿದೆ ಎಂದು ಹೇಳಿದರು.
ಪ್ರಯಾಣಿಕರ ವಾಹನ ಸಂಪೂರ್ಣ ನಿರ್ಬಂಧ:
ಜಿಲ್ಲೆಯಲ್ಲಿ ಪ್ರಯಾಣಿಕರ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತೊಳಿಸಲಾಗಿದೆ. ಗೂಡ್ಸ್ ವಾಹನಗಳ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಸಾರ್ವಜನಿಕರು ಅಗತ್ಯ ಸಂದರ್ಭಗಳಲ್ಲಿ ಮಾತ್ರ ತಮ್ಮ ವಾಹನಗಳನ್ನು ಬಳಸಿಕೊಳ್ಳಬಹುದಾಗಿದೆ ಎಂದರು.
ಮೆಗ್ಗಾನ್ ಆಸ್ಪತ್ರೆ ಸಜ್ಜು:
ಮೆಗ್ಗಾನ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೊನಾ ವೈರಸ್ ಚಿಕಿತ್ಸೆಗಾಗಿ ಮೀಸಲಿಡಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಯಾವುದೇ ರೀತಿಯ ತುರ್ತು ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಪ್ರಸ್ತುತ ನಗರದಲ್ಲಿ 45 ವೆಂಟಿಲೇಟರ್ಗಳು ಲಭ್ಯವಿದ್ದು, ಇನ್ನೂ 15 ವೆಂಟಿಲೇಟರ್ಗಳನ್ನು ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ. ವೈದ್ಯಕೀಯ ಸಿಬ್ಬಂದಿ ಹಾಗೂ ರೋಗಿಗಳಿಗೆ ಅಗತ್ಯವಿರುವಷ್ಟು ಮುಖಗವಸು, ಕೈಗವಸು, ಸ್ಯಾನಿಟೈಸರ್ಗಳು ಲಭ್ಯವಿದ್ದು, ಇನ್ನಷ್ಟು ದಾಸ್ತಾನು ಮಾಡಲಾಗುವುದು. ಅಗತ್ಯವಿರುವ ಔಷಧಿ ಸಾಮಾಗ್ರಿಗಳನ್ನು ಸಂಗ್ರಹಿಸಿಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಳ್ಳುವ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.
ಹೊರ ರೋಗಿ ಸೇವೆ ಸ್ಥಗಿತ ಬೇಡ:
ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸದಿರುವಂತೆ ಸಲಹೆ ನೀಡಲಾಗಿದೆ. ಒಂದಕ್ಕಿಂತ ಹೆಚ್ಚು ರೋಗ ಲಕ್ಷಣ ಇರುವವರನ್ನು ಚಿಕಿತ್ಸೆಗಾಗಿ ಮೆಗ್ಗಾನ್‍ಗೆ ಕಳುಹಿಸುವಂತೆ ಸೂಚಿಸಲಾಗಿದ್ದು, ಉಳಿದವರನ್ನು ಖಾಸಗಿ ಆಸ್ಪತ್ರೆಯಲ್ಲಿಯೇ ತಪಾಸಣೆ ಮಾಡಲು ಸೂಚಿಸಲಾಗಿದೆ ಎಂದರು.
ಕಣ್ಗಾವಲು:
ವಿದೇಶದಿಂದ ಬಂದವರ ಮೇಲೆ ನಿರಂತರ ನಿಗಾ ಇರಿಸಲಾಗಿದೆ. ಅವರು ಮನೆಯಿಂದ ಯಾವುದೇ ಕಾರಣಕ್ಕೂ ಹೊರಗೆ ಬಾರದಂತೆ ಸೂಚನೆಗಳನ್ನು ನೀಡಲಾಗಿದೆ. ಅಂತವರ ಮನೆಗಳನ್ನು ಗುರುತಿಸಲು ಪೋಸ್ಟರ್ಗಳನ್ನು ಹಚ್ಚಲು ಸೂಚಿಸಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ನಿಗಾ ಇರಿಸಿರುವ ಬಗ್ಗೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ. ಅಗತ್ಯ ಬಿದ್ದರೆ ನಿಗಾ ವಹಿಸಲು ಸಿಬ್ಬಂದಿ ನೇಮಕ ಮಾಡಲು ಸೂಚಿಸಲಾಗಿದೆ ಎಂದರು. ಬೆಂಗಳೂರಿನಿಂದ ನಿನ್ನೆ ಸುಮಾರು 500ಕ್ಕೂ ಹೆಚ್ಚು ಮಂದಿ ಜಿಲ್ಲೆಗೆ ಆಗಮಿಸಿದ್ದು, ಎಲ್ಲಾ ವಾಹನಗಳ ಸಂಖ್ಯೆ, ಪ್ರಯಾಣಿಕರ ಮೊಬೈಲ್ ಸಂಖ್ಯೆಗಳನ್ನು ಮುಂಜಾಗ್ರತಾ ಕ್ರಮವಾಗಿ ಸಂಗ್ರಹಿಸಲಾಗಿದೆ ಎಂದು ಹೇಳಿದ್ದಾರೆ.