ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ನಡೆದ ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪಟ್ಟಣದಲ್ಲಿ ಇಂದು ಮಾರುಕಟ್ಟೆಯಲ್ಲಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದ ಯುವಕರಿಗೆ ಬುದ್ಧಿ ಹೇಳಿದ್ದಕ್ಕೆ ಮಂಜುನಾಥ್ (28) ಹಾಗೂ ಸುರೇಶ್ (38) ಎಂಬುವರ ಮೇಲೆ ಅನ್ಯಕೋಮಿನ ಯುವಕರ ಗುಂಪು ಹಲ್ಲೆ ನಡೆಸಿದೆ. ನಮಗೆ ಬುದ್ಧಿ ಹೇಳ್ತಿಯಾ ಎಂದು ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವವರ ಬಳಿ ಇದ್ದ ತೂಕದ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಸ್ಥಳೀಯರ ಸಹಾಯದಿಂದ ಹಲ್ಲೆ ನಡೆಸಿದ ಓರ್ವನನ್ನು ಗಾಯಗೊಂಡವರು ಹಿಡಿದು ಪೊಲೀಸರಿಗೆ ಒಪ್ಪಿಸಿ, ಇಬ್ಬರು ಶಿರಾಳಕೊಪ್ಪ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಹಲ್ಲೆ ನಡುವೆ ಪೊಲೀಸರ ಬಳಿ ಇದ್ದ ಆಸೀಫ್ ಎಂಬಾತ ಮೆಗ್ಗಾನ್ ಆಸ್ಪತ್ರೆಗೆ ಬಂದು ದಾಖಲಾಗಿದ್ದಾನೆ. ಹಲ್ಲೆಯಿಂದ ಗಾಯಗೊಂಡಿದ್ದ ಸುರೇಶ್ ಹಾಗೂ ಮಂಜುನಾಥ್ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎರಡನೇ ಪ್ರಕರಣ: ತುಂಗಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಅಪ್ರಾಪ್ತನ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ. ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ 17 ವರ್ಷದ ಬಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಈತ ಕೆಲಸ ಮುಗಿಸಿಕೊಂಡು ನದಿಯಲ್ಲಿ ಸ್ನಾನಕ್ಕೆ ಹೋದಾಗ ನಮ್ಮ ಜಾಗಕ್ಕೆ ಬಂದು ಹಾರಾಡುತ್ತಿಯಾ ಎಂದು ದೊಣ್ಣೆಯಿಂದ ತಲೆಗೆ ಬಲವಾಗಿ ಹೊಡೆದಿದ್ದಾರೆ. ಈತನು ಸಹ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ: ಕುಂದಾನಗರಿ ಬೆಳಗಾವಿ ನಗರ ಪೊಲೀಸರು ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷನ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣ ಸಂಬಂಧ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಇಂದು ಬಂಧಿಸಿದ್ದಾರೆ. ಘಟನೆ ನಡೆದ 18 ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬೆಳಗಾವಿ ನಿವಾಸಿ ಅಭಿಜಿತ್ ಭಾತ್ಕಾಂಡೆ, ಬಸ್ತವಾಡ ಗ್ರಾಮದ ನಿವಾಸಿ ರಾಹುಲ್ ಕೊಡಚವಾಡ, ಜ್ಯೋತಿಬಾ ಗಂಗಾರಾ ಎಂದು ಗುರುತಿಸಲಾಗಿದೆ.
ಪ್ರಕರಣ ಹಿನ್ನೆಲೆ.. ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿದ್ದರು. ಆರೋಪಿಗಳನ್ನು ಬಂಧಿಸಲು ಪೊಲೀಸ್ ಕಮಿಷನರ್ ಬೋರಲಿಂಗಯ್ಯ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಡಿಸಿಪಿ ರವೀಂದ್ರ ಗಡಾದಿ ನೇತೃತ್ವದ ತಂಡದಿಂದ ಆರೋಪಿಗಳನ್ನು ಬಂಧಿಸಲಾಗಿದೆ.
'ಹಣಕಾಸಿನ ವ್ಯವಹಾರ, ವೈಯಕ್ತಿಕ ದ್ವೇಷದ ಹಿನ್ನೆಲೆ ಘಟನೆ ನಡೆದಿದೆ. ಶನಿವಾರ ಸಂಜೆ 7.30ರ ಸುಮಾರಿಗೆ ಹಿಂಡಲಗಾ ಬಳಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಸಂಗಡಿಗರು ವಾಹನದಲ್ಲಿ ಹೋಗುತ್ತಿದ್ದರು. ಈ ವೇಳೆ ದ್ವಿಚಕ್ರವಾಹನದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಫೈರಿಂಗ್ ಮಾಡಿದ್ದರು. ಈ ಸಂದರ್ಭದಲ್ಲಿ ರವಿ ಕೋಕತ್ಕರ್ ಗಾಯಗೊಂಡಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ' ಎಂದು ನಗರ ಪೊಲೀಸ್ ಆಯುಕ್ತ ಡಾ. ಎಂ. ಬಿ ಬೋರಲಿಂಗಯ್ಯ ತಿಳಿಸಿದ್ದಾರೆ.
ಹಳೆ ವೈಷಮ್ಯ ಹಿನ್ನೆಲೆ ಗುಂಡಿನ ದಾಳಿ : ಪ್ರಮುಖ ಆರೋಪಿ ಅಭಿಜಿತ್ ಹಾಗೂ ರವಿ ಕೋಕಿತಕರ್ ಮಧ್ಯೆ ರಿಯಲ್ ಎಸ್ಟೇಟ್ ವ್ಯವಹಾರ ಇತ್ತು. 2020ರ ಜನವರಿ 1ರಂದು ಆರೋಪಿ ಅಭಿಜಿತ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಈ ಪ್ರಕರಣದಲ್ಲಿ ಗಾಯಾಳು ರವಿ ಕೋಕಿತಕರ್ ಪ್ರಮುಖ ಆರೋಪಿಯಾಗಿದ್ದ. ಹಣಕಾಸಿನ ವ್ಯವಹಾರ ಹಳೆಯ ವೈಷಮ್ಯ ಹಿನ್ನೆಲೆ ಈ ಘಟನೆ ನಡೆದಿದೆ ಎಂದು ಅವರು ಮಾಹಿತಿ ನೀಡಿದರು.
ಓದಿ: ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ- ಮೂವರು ಗಾಂಜಾ ಸಾಗಾಟಗಾರರ ಬಂಧನ, ಮಾದಕ ದ್ರವ್ಯ ವಶಕ್ಕೆ