ಶಿವಮೊಗ್ಗ: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಸಂಪೂರ್ಣ ಅವೈಜ್ಞಾನಿಕವಾಗಿವೆ ಎಂಬ ಆರೋಪ ಕೇಳಿ ಬಂದಿದೆ.
ಹೀಗಾಗಿ ಕೂಡಲೇ ಮೇಯರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಸಂಬಂಧಪಟ್ಟ ಎಂಜಿನಿಯರ್‌ಗಳನ್ನು ಅಮಾನತಿನಲ್ಲಿಡಬೇಕು ಎಂದು ಅಣ್ಣಾ ಹಜಾರೆ ಹೋರಾಟ ಸಮಿತಿ ಒತ್ತಾಯಿಸಿದೆ.
ನಗರದ ಶರಾವತಿ ನಗರ ಬಡಾವಣೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಯುಜಿ ಕೇಬಲ್‌ಗಳನ್ನು ಹಾಗೂ 24x7 ಕುಡಿಯುವ ನೀರು ಯೋಜನೆಯ ಪೈಪ್‌ಲೈನ್‌ಗಳನ್ನು ಒಂದು ಮೀಟರ್ ಆಳದಲ್ಲಿ ಅಳವಡಿಸಬೇಕೆಂಬ ನಿಯಮವಿದೆ. ಆದರೆ ಯುಜಿ ಕೇಬಲ್ ಹಾಗೂ ನೀರಿನ ಪೈಪ್ಲೈನ್ಅನ್ನು ಒಂದು ಅಡಿ ಆಳದಲ್ಲಿ ಹಾಕಲಾಗಿದೆ. ಇದು ಮುಂದಿನ ದಿನಗಳಲ್ಲಿ ಅನಾಹುತಕ್ಕೆ ದಾರಿಯಾಗಲಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಹೋರಾಟ ಸಮಿತಿಯ ಪದಾಧಿಕಾರಿಗಳು ದೂರಿದರು.
ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ನಡೆಸಲಾಗುತ್ತಿದೆ. ಈ ಬಗ್ಗೆ ನಾವು ಸಂಬಂಧಪಟ್ಟ ಇಲಾಖಾ ಎಂಜಿನಿಯರ್ ಸ್ಥಳಕ್ಕೆ ಬರುವಂತೆ ಒತ್ತಾಯಿಸಿದ್ದೆವು. ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಕಾಮಗಾರಿಯಲ್ಲಿ ಆಗಿರುವ ಲೋಪವನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೆ ಸಂಬಂಧಪಟ್ಟ ಗುತ್ತಿಗೆದಾರನಿಗೆ ಸರಿಪಡಿಸುವಂತೆ ಸೂಚಿಸಿದ್ದಾರೆ. ಆದರೆ ನಗರದಲ್ಲಿ ನಡೆಯುತ್ತಿರುವ ಈ ಯೋಜನೆಯ ಎಲ್ಲಾ ಕಾಮಗಾರಿಗಳು ಬಹುತೇಕ ಅವೈಜ್ಞಾನಿಕವಾಗಿದ್ದು, ಈ ಹಿನ್ನೆಲೆ ಸಂಬಂಧಪಟ್ಟ ಎಂಜಿನಿಯರ್‌ಗಳ ವಿರುದ್ಧ ಸೂಕ್ತ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಾಗರ ರಸ್ತೆಯಲ್ಲಿಯೂ ಸಹ ಯೋಜನೆಯ ಕಾಮಗಾರಿ ನಡೆಯುತ್ತಿದೆ. ಇಲ್ಲಿಯೂ ಸಹ ಸಂಪೂರ್ಣ ಅವೈಜ್ಞಾನಿಕ ಕಾಮಗಾರಿ ನಡೆದಿದೆ. ಹೀಗಾಗಿ ನಮ್ಮ ಸಂಘಟನೆಯ ಪದಾಧಿಕಾರಿಗಳು ಸ್ಮಾರ್ಟ್ ಸಿಟಿ ಕಚೇರಿ ಎದುರು ಧರಣಿ ಆರಂಭಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಸಂಬಂಧಪಟ್ಟ ಎಂಜಿನಿಯರ್‌ಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಅಲ್ಲದೆ ಕಾಮಗಾರಿಯನ್ನು ನಿಯಮಬದ್ಧವಾಗಿ ಮತ್ತು ವೈಜ್ಞಾನಿಕವಾಗಿ ನಡೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೋರಾಟ ಸಮಿತಿಯ ಅಶೋಕ್ ಯಾದವ್ ಆಗ್ರಹಿಸಿದರು.