ಶಿವಮೊಗ್ಗ: ಅಂಗನವಾಡಿ ಕೇಂದ್ರದಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಬೇಕು ಎಂದು ಜಿಲ್ಲಾ ಅಂಗನವಾಡಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಂ ಜಯಲಕ್ಷ್ಮಿ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯ ಪ್ರಕಾರ 3ರಿಂದ 8 ವರ್ಷದ ಒಂದು ವರ್ಗೀಕರಣ ಮಾಡಿ, ಆ ಮಾಧ್ಯಮವನ್ನು ಶಿಕ್ಷಣ ಇಲಾಖೆಯಡಿ ತೆರೆಯಬೇಕಾಗಿದೆ. ಇದರನ್ವಯ ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಎಲ್ಕೆಜಿ-ಯುಕೆಜಿ ಪ್ರಾರಂಭಿಸಲಾಗಿದೆ. ಇದರಿಂದ ಅಂಗನವಾಡಿ ಕೇಂದ್ರಗಳು ಮುಚ್ಚುವ ಅಪಾಯವಿದೆ. ಹಾಗಾಗಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಬೇಕು ಎಂದರು.
ಅಂಗನವಾಡಿಗಳು ಮುಚ್ಚಿದರೆ ಇದನ್ನೆ ನೆಚ್ಚಿಕೊಂಡು ಬದುಕುತ್ತಿರುವ ಸಾವಿರಾರು ಕುಟುಂಬಗಳು ಬೀದಿಗೆ ಬರುತ್ತವೆ. ಹಾಗಾಗಿ ಆ ತರಬೇತಿಯನ್ನು ನಮಗೆ ನೀಡಿ, ಅಂಗನವಾಡಿ ಕೇಂದ್ರದಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಬೇಕು. ಅಂಗನವಾಡಿ ಕೇಂದ್ರಗಳನ್ನ ಮೇಲ್ದರ್ಜೆಗೆ ಏರಿಸಬೇಕು ಎಂದರು.
ಅಂಗನವಾಡಿ ಕೇಂದ್ರದಲ್ಲಿ ಸೇವೆ ಸಲ್ಲಿಸುವ ನಾವುಗಳು ಸರ್ಕಾರದ ಅನೇಕ ಯೋಜನೆಗಳನ್ನ ಜನಸಾಮಾನ್ಯರಿಗೆ ತಿಳಿಸುವ ಕೆಲಸ ಮಾಡುತ್ತೇವೆ ಎಂದರು.