ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನವೆಂಬರ್ 26ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹೆಚ್ ಆರ್ ಬಸವರಾಜಪ್ಪ ತಿಳಿಸಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ಅಧಿಕಾರದ ಮದ ಏರಿ ಜನ ವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಜನರನ್ನು ಬೀದಿಗೆ ತರಲು ಹೊರಟಿದೆ. ಹಾಗಾಗಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆಗಳನ್ನು ವಿರೋಧಿಸಿ ದೇಶದ 240ಕ್ಕೂ ಹೆಚ್ಚು ಸಂಘಟನೆಗಳು ನವೆಂಬರ್ 26,27ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಮುಷ್ಕರಕ್ಕೆ ಕರೆ ನೀಡಿವೆ.
ಅದರಂತೆ ಅಲ್ಲಿಗೆ ಹೋಗಲು ಕೊರೊನಾ ಇರುವ ಕಾರಣ ದೆಹಲಿಗೆ ಹೋಗದೆ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದರು. 26ರಂದು ಮಹಾವೀರ ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಸರ್ಕಾರ ಜಾರಿಗೆ ತಂದಿರುವ ಜನ ವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು. ಇಲ್ಲವಾದರೆ ದೇಶದ ಜನರು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಮನೆಗೆ ಕಳಿಸುತ್ತಾರೆ ಎಂದು ಎಚ್ಚರಿಸಿದರು.