ಶಿವಮೊಗ್ಗ : ಹವಾಮಾನ ಇಲಾಖೆ ಮಾಹಿತಿಯಂತೆ ಇಂದಿನಿಂದ 2-3 ದಿನಗಳ ಕಾಲ ತೌಕ್ತೆ ಚಂಡಮಾರುತ ರಾಜ್ಯದಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಇದರಿಂದ ಹೆಚ್ಚಿನ ಮಳೆ ಆಗುವ ಸಂಭವವಿದ್ದು ಸಾರ್ವಜನಿಕರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಸುರಕ್ಷತಾ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚನೆ ನೀಡಿದ್ದಾರೆ.
ಈ ಸಂಬಂಧ ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಎಲ್ಲಾ ತಾಲೂಕುಗಳ ತಹಶೀಲ್ದಾರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಅಗತ್ಯ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
![ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸಭೆ](https://etvbharatimages.akamaized.net/etvbharat/prod-images/11764373_267_11764373_1621040340830.png)
ಕೊರೊನಾ ಸೋಂಕು ಜಿಲ್ಲೆಯಲ್ಲಿ ಹೆಚ್ಚಾಗಿರುವಾಗಲೇ ಮುಂಗಾರು ಮಳೆಯಿಂದ ಸಂಭವಿಸಬಹುದಾದ ಹಾನಿಗಳನ್ನು ನಿಯಂತ್ರಿಸುವ ಕಾರ್ಯದಲ್ಲಿ ರಕ್ಷಣಾ, ಕಂದಾಯ, ಅಗ್ನಿಶಾಮಕ, ಮೆಸ್ಕಾಂ ಹಾಗೂ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿದ್ದತೆಗಳನ್ನು ಕೈಗೊಂಡು ಸನ್ನದ್ಧರಾಗಿರುವಂತೆ ಸೂಚಿಸಿದರು. ಮುಂಗಾರು ಮಳೆಯಿಂದಾಗುವ ಅನಾಹುತದ ಪರಿಹಾರ ಕಾರ್ಯಗಳಿಗೆ ತಾಲೂಕುವಾರು 25 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗುವುದು ಎಂದರು.
ಇದೆ ಸಂದರ್ಭದಲ್ಲಿ ಸಕಾಲಕ್ಕೆ ನೆರವಿಗೆ ಧಾವಿಸುವ ಪ್ರಕೃತಿ ವಿಕೋಪ ಕಾರ್ಯಾಚರಣೆ ತಂಡದ ಸದಸ್ಯರ ಮೊಬೈಲ್ ನಂಬರನ್ನು ಸಂಗ್ರಹಿಸಿಟ್ಟುಕೊಳ್ಳುವಂತೆ ಹಾಗೂ ಮಳೆಗಾಳಿಯಿಂದ ಧರೆಗುರುಳುವ ಮರಗಳನ್ನು ತೆರವುಗೊಳಿಸಲು ಅಗತ್ಯ ಸಿಬ್ಬಂದಿಗಳನ್ನು ಸಿದ್ದವಾಗಿರಲು ಸೂಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿನ ಚರಂಡಿಗಳು ಸರಾಗವಾಗಿ ಮಳೆ ನೀರನ್ನು ಹರಿಯುವಂತೆ ಸ್ವಚ್ಚವಾಗಿಟ್ಟುಕೊಳ್ಳುವಲ್ಲಿ ಕ್ರಮ ಕೈಗೊಳ್ಳುವಂತೆ ಹಾಗೂ ಮಳೆ ಹಾನಿಯಿಂದ ರಕ್ಷಣೆಗಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪ್ರತ್ಯೇಕ ಸಹಾಯವಾಣಿ ಕೇಂದ್ರವನ್ನು ತೆರೆದು ಸಿಬ್ಬಂದಿಯನ್ನು ನಿಯೋಜಿಸುವಂತೆ ಸೂಚಿಸಿದರು.
ವಿಶೇಷವಾಗಿ ಜಿಲ್ಲೆಯ ಜಲಾಶಯ, ನಾಲೆ, ನದಿದಂಡೆಗಳ ಪಾತ್ರದಲ್ಲಿರುವ ನಿವಾಸಿಗಳು ತುರ್ತು ಕ್ರಮ ವಹಿಸುವಂತೆ ಸೂಚಿಸಿದ ಅವರು, ಭಾರೀ ಮಳೆಯಿಂದ ಅನಾಹುತ ಸಂಭವಿಸಬಹುದಾದ ಹಿನ್ನೆಲೆಯಲ್ಲಿ ರಸ್ತೆ ಸಾರಿಗೆ ಬಸ್ಸುಗಳನ್ನು ರಸ್ತೆಗೆ ಇಳಿಸದಂತೆ ಹಾಗೂ ಭಾರಿ ಮಳೆ ಬೀಳುವ ಆಗುಂಬೆಯಂತಹ ಪ್ರದೇಶದಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡದಂತೆ ಸೂಚಿಸಲಾಗಿದೆ. ಒಂದೊಮ್ಮೆ ಅವಘಡಗಳು ಸಂಭವಿಸಿದಲ್ಲಿ ಅಲ್ಲಿನ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿಸಲಾಗುವುದು ಎಂದರು. ತೀರ್ಥಹಳ್ಳಿ ತಾಲೂಕಿನಲ್ಲಿ ಇತ್ತೀಚಿಗೆ ಸಿಡಿಲಿನಿಂದ ಮೃತ ವ್ಯಕ್ತಿಯ ಕುಟುಂಬಕ್ಕೆ ತುರ್ತು ಪರಿಹಾರಧನ ಬಿಡುಗಡೆ ಮಾಡುವಂತೆ ತಹಶೀಲ್ದಾರ್ಗೆ ಸೂಚಿಸಿದರು.