ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಮತ್ತು ಮಲೆನಾಡು ಭಾಗದ ಹಲವು ಜಿಲ್ಲೆಗಳು ರೆಡ್ ಅಲರ್ಟ್ ವ್ಯಾಪ್ತಿಯಲ್ಲಿವೆ. ಕಳೆದೆರಡು ದಿನದಿಂದ ನೈಋತ್ಯ ಮಾನ್ಸೂನ್ ಬಿರುಸಾಗಿದೆ. ಹೀಗಾಗಿ ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಜನರಿಗೆ ಸೂಚನೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನದಿ, ಕೆರೆ ದಂಡೆಯಲ್ಲಿರುವವರು ಜಾಗರೂಕರಾಗಿರಬೇಕು. ಯಾವುದೇ ಕಾರಣಕ್ಕೂ ನದಿ ಅಥವಾ ಕೆರೆಗಳ ಸಮೀಪ ತೆರಳಬಾರದು. ಅತಿವೃಷ್ಟಿ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.