ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಯೋಜನೆಯ ಬಗ್ಗೆ ಮಾಹಿತಿ ಒದಗಿಸಲು ಹಾಗೂ ಕ್ರಿಯಾ ಯೋಜನೆಯನ್ನು ರೂಪಿಸುವುದಕ್ಕೆ ಸಂಬಂಧಿಸಿದಂತೆ ಮಾರ್ಚ್ 14ರಂದು ಶಿವಮೊಗ್ಗದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ತಾಲೂಕು ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ ಜನಪ್ರತಿನಿಧಿಗಳಿಗೆ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗುತ್ತಿದೆ. ಮಾರ್ಚ್ 15ರಂದು ಕೋಲಾರದಲ್ಲಿ ಕಾರ್ಯಾಗಾರ ನಡೆಸಲಾಗುವುದು ಎಂದರು.
ಮಳೆಯ ನೀರು ಹರಿದು ಹೋಗಿ ವ್ಯರ್ಥವಾಗಲು ಬಿಡದೆ ಭೂಮಿಯಲ್ಲಿಯೇ ಇಂಗಿ ಹೋಗುವಂತೆ ಯೋಜನೆಯಡಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಇದಕ್ಕಾಗಿ ನದಿಯ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಸಿಗಳನ್ನು ನೆಡುವುದು, ಸಣ್ಣಪುಟ್ಟ ಚೆಕ್‍ಡ್ಯಾಂಗಳ ನಿರ್ಮಾಣ, ಇಂಗು ಗುಂಡಿಗಳ ನಿರ್ಮಾಣದಂತಹ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಪ್ರಥಮ ಹಂತದಲ್ಲಿ ಪೂರ್ವಕ್ಕೆ ಹರಿಯುವ ನದಿಗಳನ್ನು ಪುನಶ್ಚೇತನಗೊಳಿಸಲು ಉದ್ದೇಶಿಸಲಾಗಿದೆ. ನದಿ ಮೂಲದ ಸಂರಕ್ಷಣೆಗೂ ಈ ಸಂದರ್ಭದಲ್ಲಿ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಈಗಾಗಲೇ ನದಿಗಳ ಪುನಶ್ಚೇತನ ಕಾರ್ಯವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ರಾಮನಗರದಲ್ಲಿ ಕೈಗೊಳ್ಳಲಾಗಿದೆ. ಇದೀಗ ಶಿವಮೊಗ್ಗ, ಕೋಲಾರ, ತುಮಕೂರು, ಬಳ್ಳಾರಿ, ಯಾದಗಿರಿ, ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ, ಕೊಡಗು, ಉಡುಪಿ ಮತ್ತು ಕಾರವಾರ ಜಿಲ್ಲೆಯ 2 ತಾಲೂಕುಗಳಲ್ಲಿ ಕೈಗೊಳ್ಳಲಾಗುತ್ತಿದೆ. ಈ ಯೋಜನೆಯಡಿ ನದಿಗೆ ಸೇರುವ ಪ್ರಮುಖ ಹಳ್ಳಕೊಳ್ಳಗಳ ನಕ್ಷೆ ತಯಾರಿಸಿ, ಅವನ್ನು ಸಂರಕ್ಷಿಸುವ ಕಾರ್ಯವನ್ನು ಸಹ ಕೈಗೊಳ್ಳಲಾಗುವುದು ಎಂದು ಹೇಳಿದರು.