ಶಿವಮೊಗ್ಗ : ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಎಸ್‌ಡಿಪಿಐ ಸಂಘಟನೆ ಪ್ರತಿಭಟನೆ ನಡೆಸಿದೆ.
ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಕೇಂದ್ರ ಸರ್ಕಾರ ಪ್ರತಿದಿನ ತೈಲ ಬೆಲೆ ಏರಿಕೆ ಮಾಡುತ್ತಿದೆ. ಇದರಿಂದ ಸಮಾಜದ ಎಲ್ಲಾ ಸ್ತರದ ವ್ಯಕ್ತಿಗಳ ಮೇಲೆ ನೇರ ಪರಿಣಾಮ ಬೀಳುತ್ತದೆ. ಜನ ಸಾಕಷ್ಟು ತೊಂದರೆಗೆ ಒಳಗಾಗಿದ್ದಾರೆ. ಕೇಂದ್ರ ಸರ್ಕಾರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಇರುವ ತೈಲ ದರದಂತೆಯೇ ಭಾರತದಲ್ಲೂ ಜಾರಿಗೆ ತರಬೇಕಿದೆ ಎಂದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಕಡಿಮೆ ಇದ್ದರೂ ದೇಶದಲ್ಲಿ ದಿನೇದಿನೆ ತೈಲ ಬೆಲೆ ಏರಿಕೆ ಮಾಡಲಾಗುತ್ತಿದೆ. ಇದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಲ್ಲದೆ ಲಾಕ್ಡೌನ್ನಿಂದಾಗಿ ದೇಶದ ಜನ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಎರಡು ತಿಂಗಳ ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.