ಶಿವಮೊಗ್ಗ: ಆರು ಮಂದಿ ಕಾರ್ಮಿಕರ ಸಾವಿಗೆ ಕಾರಣವಾದ ಹುಣಸೋಡು ಸ್ಫೋಟದ ನೈತಿಕ ಹೊಣೆಹೊತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ. ಪುಷ್ಪ ಅಮರನಾಥ್ ಒತ್ತಾಯಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2015 ರಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾಗ ಸಚಿವ ಈಶ್ವರಪ್ಪನವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಊರಿನ ಅಭಿವೃದ್ಧಿಗೆ ಕಣ್ಣುಮುಚ್ಚಿಕೊಂಡು ಕುಳಿತುಕೊಳ್ಳಿ ಎಂದು ಹೇಳಿರುವುದು ಪ್ರತಿಕೆಗಳಲ್ಲಿ ಬಂದಿದೆ. ಅವರ ಬೇಜವಾಬ್ದಾರಿ ಹೇಳಿಕೆಯಿಂದ ಇಂದು ಸ್ಫೋಟ ಸಂಭವಿಸಿ ಆರು ಮಂದಿ ಸಾವನ್ನಪ್ಪಿದ್ದಾರೆ. ಹಾಗಾಗಿ ಸ್ಫೋಟದ ನೈತಿಕ ಹೊಣೆ ಹೊತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಸ್ಫೋಟದಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅನೇಕ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಹಾಗಾಗಿ ಅವರ ಮೇಲೆ ಪ್ರಕರಣ ದಾಖಲಿಸಿ ತನಿಖೆಗೆ ಈಗ ರಚಿಸಿರುವ ಸಮಿತಿ ರದ್ದುಗೊಳಿಸಿ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಬೇಕು. ಸಾವನ್ನಪ್ಪಿದ ಕಾರ್ಮಿಕರಿಗೆ ಹೆಚ್ಚಿನ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ದೇಶದ ಜನ ನೆಮ್ಮದಿಯಿಂದ ಬದುಕುವುದು ದುಸ್ತರವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಬಿಜೆಪಿ ಭಕ್ತರು ನಾವು ದೇಶಕ್ಕಾಗಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಖರೀದಿಸುತ್ತೇವೆ ಎನ್ನುತ್ತಾರೆ. ಹಾಗಾಗಿ ಭಕ್ತರಿಗಾಗಿ ಬೇಕಾದರೆ ಪ್ರತ್ಯೇಕ ಪೆಟ್ರೋಲ್ ಬಂಕ್ ಮಾಡಿಕೊಳ್ಳಲಿ, ಆದರೆ ಜನ ಸಾಮಾನ್ಯರಿಗೆ ಕಡಿಮೆ ದರದಲ್ಲಿ ಸಿಗುವ ಹಾಗೆ ಸರ್ಕಾರ ಬೆಲೆ ಇಳಿಕೆ ಮಾಡಲಿ. ಈ ವಿಷಯಗಳ ಬಗ್ಗೆ ಮಾತನಾಡಿದರೆ ದೇಶದ್ರೋಹಿಗಳು ಎಂದು ಪಟ್ಟಕಟ್ಟುತ್ತಾರೆ ಎಂದರು.