ಶಿವಮೊಗ್ಗ: ರಾಜ್ಯಾದ್ಯಂತ ಇಂದು ಮತ್ತು ನಾಳೆ ಸಿಇಟಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆ ಪರೀಕ್ಷೆ ಸುಗಮವಾಗಿ ನಡೆಸಲು ಶಿವಮೊಗ್ಗ ಜಿಲ್ಲಾಡಳಿತ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.
ಜಿಲ್ಲೆಯ 15 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, 6888 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆಗೆಂದು ಬಂದ ಪ್ರತಿ ವಿದ್ಯಾರ್ಥಿಗೂ ಸ್ಯಾನಿಟೈಸರ್ ನೀಡಿ, ಥರ್ಮಲ್ ಸ್ಕ್ರೀನಿಂಗ್ ಮಾಡಲಾಯಿತು.
ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಕಂಟೈನ್ಮೆಂಟ್ ಝೋನ್ನಿಂದ ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೋಠಡಿ ಮೀಸಲಿರಿಸಲಾಗಿದೆ. ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಕೋವಿಡ್ ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿದೆ.