ಶಿವಮೊಗ್ಗ: ಕೋವಿಡ್ ತಡೆಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ ಮಾಡಿದೆ. ಹೀಗಿರುವಾಗ ಸರ್ಕಾರದ ಆದೇಶವನ್ನು ಲೆಕ್ಕೆಸದೆ, ಕೊರೊನಾ ಭಯವಿಲ್ಲದೇ ಅನಗತ್ಯವಾಗಿ ಓಡಾಡುವವರ ಸಂಖ್ಯೆ ಶಿವಮೊಗ್ಗ ನಗರದಲ್ಲಿ ಹೆಚ್ಚಾಗಿತ್ತು. ಹಾಗಾಗಿ ಎಸ್ಪಿ ಲಕ್ಷ್ಮಿ ಪ್ರಸಾದ್ ಹಾಗೂ ಡಿವೈಎಸ್ಪಿ ಪ್ರಶಾಂತ್ ವಾಹನ ತಪಾಸಣೆ ನಡೆಸಿ ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಹನ್ನೆರಡು ಗಂಟೆಯ ನಂತರವು ವಾಹನ ದಟ್ಟಣೆ ಹೆಚ್ಚಾಗಿರುವುದನ್ನು ಗಮನಿಸಿದ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್, ನಗರದ ಜೈಲ್ ವೃತ್ತದಲ್ಲಿ ಬ್ಯಾರಿಕೇಡ್ಗಳನ್ನು ಹಾಕಿಸಿ ಸಂಪೂರ್ಣ ವಾಹನ ಸಂಚಾರ ಬಂದ್ ಮಾಡಿಸಿ ಅನಗತ್ಯವಾಗಿ ಓಡಾಡುತ್ತಿದ್ದ ವಾಹನ ಸವಾರರ ವಾಹನಗಳನ್ನು ವಶಕ್ಕೆ ಪಡೆದುಕೊಂಡರು. ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್, ವಾಹನ ದಟ್ಟಣೆ ಹೆಚ್ಚಾಗಿದೆ. ಹಾಗಾಗಿ ಅನಗತ್ಯವಾಗಿ ಓಡಾಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುತ್ತೇವೆ ಹಾಗೂ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಲಾಕ್ಡೌನ್ ನಿಯಮವನ್ನು ಉಲ್ಲಂಘನೆ ಮಾಡಿದ ಅಂಗಡಿಯ ಮಾಲೀಕರ ವಿರುದ್ಧ THE KARNATAKA EPIDEMIC DISEASES ACT 2020ರ ಕಾಯ್ದೆಯ ಅಡಿಯಲ್ಲಿ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ 04, ಜಯನಗರ ಪೊಲೀಸ್ ಠಾಣೆಯಲ್ಲಿ 01, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 01, ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ 02, ಹೊಸನಗರ ಪೊಲೀಸ್ ಠಾಣೆಯಲ್ಲಿ 01, ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ 01, ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ 05, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 01 ಪ್ರಕರಣ ಸೇರಿ ಒಟ್ಟು 16 ಪ್ರಕರಣಗಳನ್ನು ದಾಖಲಿಸಲಾಗಿದೆ.
ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್ ದುರಂತಕ್ಕೆ ನೊಂದು ಸಿಎಂಗೆ ಭಾವನಾತ್ಮಕ ಪತ್ರ ಬರೆದ ರಮೇಶ್ ಕುಮಾರ್
ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಅನಗತ್ಯವಾಗಿ ಓಡಾಡುತ್ತಿದ್ದ ವಾಹನ ಸವಾರರ ಒಟ್ಟು 77 ವಾಹನಗಳನ್ನು (73 ದ್ವಿ ಚಕ್ರ ವಾಹನಗಳು ಮತ್ತು 04 ಕಾರುಗಳು ) ವಶಪಡಿಸಿಕೊಳ್ಳಲಾಗಿದೆ. ಹಾಗೂ IMV ಕಾಯ್ದೆ ಅಡಿಯಲ್ಲಿ ಒಟ್ಟು 196 ಪ್ರಕರಣಗಳನ್ನು ದಾಖಲಿಸಿ 86,900 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.