ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತಿದೆ. ಹಾಗೆಂದು ಮೈಮರೆಯದೆ ಸದಾ ಎಚ್ಚರವಾಗಿದ್ದು, ಕೊರೊನಾ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕೆಂದು ಸಂಸದ ಬಿ.ವೈ.ರಾಘವೇಂದ್ರ ಗ್ರಾಮೀಣ ಜನತೆಗೆ ಕಿವಿಮಾತು ಹೇಳಿದರು.
ಶಿವಮೊಗ್ಗ ತಾಲೂಕು ಕುಂಚೇನಹಳ್ಳಿಯ ಸೇವಾಲಾಲ್ ದೇವಸ್ಥಾನದ ಮುಂಭಾಗ ಏರ್ಪಡಿಸಿದ್ದ ಕೊರೊನಾ ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಪ್ರಸ್ತುತ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ, ಜಿಲ್ಲೆಯ ಚುನಾಯಿತ ಸಮಸ್ತ ಜನಪ್ರತಿನಿಧಿಗಳು, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ಸಂದಿಗ್ಧ ಸಂದರ್ಭದಲ್ಲಿ ಸರ್ಕಾರದೊಂದಿಗೆ ಸಾರ್ವಜನಿಕರು ಸಹಕಾರ ನೀಡಬೇಕಲ್ಲದೆ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಹೊರಡಿಸಿರುವ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ.ಅಶೋಕ ನಾಯ್ಕ ಮಾತನಾಡಿ, ಗ್ರಾಮಾಂತರ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ವಳವಾಗುತ್ತಿದೆ. ವ್ಯಕ್ತಿಯಲ್ಲಿ ಸೋಂಕಿನ ಗುಣಲಕ್ಷಣಗಳು ಕಂಡುಬಂದಲ್ಲಿ ಸ್ಥಳೀಯರು ಸಮೀಪದ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿ. ನಿಗದಿಪಡಿಸಿದ ಸ್ಥಳದಲ್ಲಿ ಕೆಲಕಾಲ ತಂಗಿದ್ದು, ಸರ್ಕಾರದಿಂದ ನೀಡಲಾಗುವ ಉಚಿತ ಚಿಕಿತ್ಸೆ ಪಡೆದು ಗುಣಮುಖರಾಗಿ. ಈ ಕ್ರಮ ಅನುಸರಿಸುವುದರಿಂದ ಹಳ್ಳಿಗಳಲ್ಲಿ ಸೋಂಕು ಮುಕ್ತಗೊಳಿಸಬಹುದಾಗಿದೆ. ಈಗಾಗಲೇ ಜಿಲ್ಲೆಯ ಕುಂಸಿ, ನವುಲೆ, ಗಾಜನೂರು ಮುಂತಾದ ಪ್ರದೇಶಗಳಲ್ಲಿ ಕೋವಿಡ್ ಆರೈಕೆ ಕೆಂದ್ರಗಳನ್ನು ತೆರೆಯಲಾಗಿದೆ ಎಂದರು.