ಶಿವಮೊಗ್ಗ: ನಾಳೆಯಿಂದ ಮಂಗಳೂರಿನಲ್ಲಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟ ಪ್ರಾರಂಭವಾಗಲಿದೆ. ಈ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಸುಮಾರು 26 ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗಿಯಾಗಲಿದ್ದು, ಜಿಲ್ಲೆಯ ಕ್ರೀಡಾಪಟುಗಳಿಗೆ ಕ್ರೀಡಾ ಇಲಾಖೆ ಯಾವುದೇ ಸಮವಸ್ತ್ರ ನೀಡದೇ ಇರುವುದಕ್ಕೆ ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಕಾರಣದಿಂದ ನಿಂತಿದ್ದ ರಾಜ್ಯ ಕ್ರೀಡಾಕೂಟ ಮತ್ತೆ ನಾಳೆಯಿಂದ ಪ್ರಾರಂಭವಾಗಲಿದೆ. ಕ್ರೀಡಾಕೂಟದಲ್ಲಿ ಅಥ್ಲೆಟಿಕ್ ಸೇರಿದಂತೆ ಎಲ್ಲಾ ರೀತಿಯ ಸ್ಪರ್ಧೆಗಳು ನಡೆಯಲಿವೆ. ಜಿಲ್ಲೆಯನ್ನು ಪ್ರತಿನಿಧಿಸುವ ವಿದ್ಯಾರ್ಥಿಗಳಿಗೆ ಕನಿಷ್ಟ ಒಂದು ಟಿ-ಶರ್ಟ್ ನೀಡಲು ಆಗದಂತಹ ಸ್ಥಿತಿಗೆ ಡಿಡಿಪಿಯು ತಲುಪಿದೆಯೇ ಎಂಬ ಪ್ರಶ್ನೆಗಳು ಸಾರ್ವಜನಿಕರಲ್ಲಿ ಹುಟ್ಟಿಕೊಂಡಿವೆ.
ಬೇರೆ ಜಿಲ್ಲೆಯ ವಿದ್ಯಾರ್ಥಿಗಳು ಆಯಾ ಜಿಲ್ಲೆಯನ್ನು ಪ್ರತಿನಿಧಿಸುವ ಟಿ-ಶರ್ಟ್, ಟ್ರಾಕ್ ಸೂಟ್ ಹಾಕಿಕೊಂಡು ಬಂದರೆ, ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟುಗಳು ಯಾವುದೇ ಗುರುತನ್ನು ಹೊಂದದೆ ಕ್ರೀಡಾಕೂಟದಲ್ಲಿ ಭಾಗಿಯಾಗುತ್ತಿರುವುದಕ್ಕೆ ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ. ಕ್ರೀಡಾ ಸಚಿವ ಕೆ.ಸಿ.ನಾರಾಯಣ ಗೌಡ ಪ್ರತಿನಿಧಿಸುವ ಜಿಲ್ಲೆಯಲ್ಲಿಯೇ ವಿದ್ಯಾರ್ಥಿಗಳಿಗೆ ಈ ರೀತಿಯ ಅಸಹಕಾರ ದೂರಕಿದರೆ, ಉಳಿದ ಜಿಲ್ಲೆಯ ವಿದ್ಯಾರ್ಥಿಗಳ ಕಥೆ ಏನು ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಉಗ್ರರ ವಿಚಾರದಲ್ಲಿ ಕಾಂಗ್ರೆಸ್ ತಮ್ಮ ನಿಲುವು ಸ್ಪಷ್ಟಪಡಿಸಬೇಕು: ಸಿಎಂ