ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮಾರ್ಚ್ 27ರಿಂದ ಏಪ್ರಿಲ್ 09ರವರೆಗೆ ನಡೆಸಲು ಉದ್ದೇಶಿಸಿದ್ದು, ಈ ಪರೀಕ್ಷೆಗಳನ್ನು ಜಿಲ್ಲೆಯ 84 ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡ್ಡಿ ಆತಂಕಗಳಿಲ್ಲದೆ ಸುಗಮವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಹೇಳಿದರು.
ನಿನ್ನೆ ರಾಜ್ಯ ಸರ್ಕಾರಿ ನೌಕರರ ಸಭಾಂಗಣದಲ್ಲಿ ಪರೀಕ್ಷೆಗಳ ಮೇಲ್ವಿಚಾರಕರಿಗಾಗಿ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತರಾದ ಸಿಬ್ಬಂದಿ ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸುವುದನ್ನು ಸಹಿಸಲಾಗುವುದಿಲ್ಲ. ಪ್ರತೀ ಸಿಬ್ಬಂದಿಯೂ ಅನಾವಶ್ಯಕವಾಗಿ ಕಾಲಹರಣ ಮಾಡದೆ ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸುವಂತೆ ಪರೀಕ್ಷಾ ಮೇಲ್ವಿಚಾರಕರಿಗೆ ಸೂಚಿಸಿದರು.
ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು ಕೇಂದ್ರದಲ್ಲಿ ಪ್ರಾಥಮಿಕವಾಗಿ ಇರಬೇಕಾದ ಶೌಚಾಲಯ, ಕುಡಿಯುವ ನೀರು ಹಾಗೂ ಸಿಸಿ ಕ್ಯಾಮರಾ, ಗೋಡೆ ಗಡಿಯಾರ ಅಳವಡಿಸಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಕರ್ತವ್ಯದಲ್ಲಿ ಶಿಸ್ತು, ಸಂಯಮ ಕಾಪಾಡಿಕೊಳ್ಳಬೇಕು. ಅಧಿಕಾರಗಳ ನಡುವೆ ಸಮನ್ವಯತೆ ಅಗತ್ಯ ಎಂದರು. ಇದೇ ಮೊದಲ ಬಾರಿಗೆ ಪರೀಕ್ಷಾ ಕೇಂದ್ರಕ್ಕೆ ಸೂಚಿಸಲಾದ ಅಧಿಕಾರಿಗಳನ್ನು ಹೊರತುಪಡಿಸಿ ಮೇಲ್ವಿಚಾರಕರನ್ನೊಳಗೊಂಡು, ಪರೀಕ್ಷಾರ್ಥಿಗಳು ಮೊಬೈಲ್, ಸ್ಮಾರ್ಟ್‍ವಾಚ್, ವಿದ್ಯುನ್ಮಾನ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಅದಕ್ಕಾಗಿ ಪ್ರತೀ ಪರೀಕ್ಷಾ ಕೇಂದ್ರದ ಮುಖ್ಯ ದ್ವಾರದಲ್ಲಿ ಮೊಬೈಲ್ ಸ್ವಾಧೀನಾಧಿಕಾರಿಗಳನ್ನು ನಿಯೋಜಿಸಲಾಗಿದೆಯೆಂದರು. ಎಲ್ಲಾ ಹಂತದ ಅಧಿಕಾರಿಗಳು ಪರೀಕ್ಷಾ ನಿಯಮಗಳನ್ನು ಪಾಲಿಸಬೇಕು. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದಲ್ಲದೇ ಕೇಂದ್ರದ ಸುತ್ತಮುತ್ತಲಿನ ಝೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗುವುದು ಎಂದರು.