ಬೆಂಗಳೂರು: ನನಗೆ ನ್ಯಾಯಾಂಗದ ಮೇಲೆ ವಿಶ್ವಾಸ ಇದೆ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ಇದರಿಂದ ನಾನು ಹೊರಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಂದು ಸಂಜೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದೆಲ್ಲವೂ ಸಾಮಾನ್ಯವಾಗಿ ಇರುವುದೇ. ಇದಕ್ಕೆ ನಾನು ತಲೆ ಕೆಡಿಸಿಕೊಳ್ಳೋದಕ್ಕೆ ಹೋಗಲ್ಲ. ಇದರಲ್ಲಿ ಸತ್ಯಾಂಶ ಏನೂ ಇಲ್ಲ ಎಂದರು. ನಿಮ್ಮ ವಿರುದ್ಧ ರಾಜಕೀಯ ಷಡ್ಯಂತ್ರ ಇದೆಯೇ ಎಂಬ ಪ್ರಶ್ನೆಗೆ ಖಂಡಿತಾ ಇದೆ ಎಂದು ಹೇಳಿದರು.
ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರು ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿಯಿಂದ ಕೋಟ್ಯಂತರ ರೂಪಾಯಿ ನಗದು ಮತ್ತು ಶೆಲ್ ಕಂಪನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂಬ ಆರೋಪವಿದೆ. ಈ ಸಂಬಂಧ ತನಿಖೆ ನಡೆಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದೆ.
ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಅವರು 2021ರ ಜೂನ್‌ನಲ್ಲಿ ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ತನಿಖೆ ನಡೆಸಿ, ನವೆಂಬರ್ 2ರ ಅಂತ್ಯದ ವೇಳೆಗೆ ಅಂತಿಮ ವರದಿ ಸಲ್ಲಿಸಲು ಸೂಚಿಸಿದ್ದಾರೆ.
ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ, ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿ ತನಿಖೆ ನಡೆಸಬೇಕು ಎಂದು ನ್ಯಾಯಾಧೀಶರು ಸೂಚನೆ ನೀಡಿ ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿದ್ದಾರೆ.
ಓದಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆಗೆ ಆದೇಶ